ಅಥಣಿ ತಾಲ್ಲೂಕಿನ 9 ಗ್ರಾಮಗಳಿಗೆ ರೂ.45 ಕೋಟಿ ವೆಚ್ಚದ ಕುಡಿಯುವ ನೀರು ಯೋಜನೆಗೆ ಸಚಿವ ಸಂಪುಟ ಅಸ್ತು: ಡಿಸಿಎಂ ಸವದಿ

ಬೆಳಗಾವಿ: ಜಿಲ್ಲೆಯ ಅಥಣಿ ತಾಲ್ಲೂಕಿನ ಸತ್ತ್ರಿ ಮತ್ತು ಇತರೆ 08 ಗ್ರಾಮಗಳಿಗೆ 45.39 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರು ಪೂರೈಕೆ ಯೋಜನೆಗೆ ರಾಜ್ಯ ಸಚಿವ ಸಂಪುಟವು ಅಂಕಿತ ನೀಡಿದೆ ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿಯವರು ತಿಳಿಸಿದರು.

promotions

ಬೆಂಗಳೂರಿನ ವಿಧಾನ ಸೌಧದಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ಅವರು ಮಾಹಿತಿ ನೀಡಿದರು.

promotions

ಸತ್ತಿಯೂ ಸೇರಿದಂತೆ ಒಟ್ಟು 09 ಗ್ರಾಮಗಳಲ್ಲಿ ಕಾಡುತ್ತಿದ್ದ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಬೇಕೆಂಬ ಬೇಡಿಕೆ ಬಹುದಿನಗಳಿಂದ ಬಾಕಿ ಇತ್ತು. ಈ ಬಗ್ಗೆ ಮುಖ್ಯಮಂತ್ರಿಯವರಲ್ಲಿಯೂ ಮನವಿ ಮಾಡಿಕೊಳ್ಳಲಾಗಿತ್ತು.

ಇಂದು ಸಚಿವ ಸಂಪುಟವು ಈ ಯೋಜನೆಗೆ ಅನುಮೋದನೆ ನೀಡಿರುವುದರಿಂದ ಆ ಭಾಗದ ಸ್ಥಳೀಯರ ಬೇಡಿಕೆಯನ್ನು ಈಡೇರಿಸಿದಂತಾಗಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಅನುಮೋದನೆ ನೀಡಿದ್ದಕ್ಕಾಗಿ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿಯವರು ಮುಖ್ಯಮಂತ್ರಿಯವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಯೋಜನೆಯಿಂದ ಹಲವು ಗ್ರಾಮಗಳಿಗೆ ಅನುಕೂಲ:

ಕೇಂದ್ರದ “ಜಲ ಜೀವನ್ ಮಿಷನ್” ಯೋಜನೆಯಡಿ 18.12 ಕೋಟಿ ರೂ.ಗಳನ್ನು, ಆರ್.ಐ.ಡಿ.ಎಫ್.(ನಬಾರ್ಡ್) ನಿಂದ 15.40 ಕೋಟಿ ರೂ.ಗಳನ್ನು ಮತ್ತು ನಮ್ಮ ರಾಜ್ಯ ಸರ್ಕಾರದಿಂದ 11.87 ಕೋಟಿ ರೂ.ಗಳ ಅನುದಾನದೊಂದಿಗೆ ಈ ಯೋಜನೆಯನ್ನು ಜಾರಿಗೊಳಿಸಲು ಸಂಪುಟವು ಹಸಿರುನಿಶಾನೆ ನೀಡಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಅಡಿಯಲ್ಲಿ ಜಾರಿಗೊಳಿಸಲಾಗುವ ಈ ಯೋಜನೆಯನ್ನು 15 ತಿಂಗಳ ಕಾಲಾವಧಿಯಲ್ಲಿ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. ಇದರಿಂದಾಗಿ ಅವರಖೋಡ, ನಾಗನೂರ ಪಿ.ಕೆ. ದೊಡವಾಡ, ನಂದೇಶ್ವರ, ಸವದಿ, ಹಲ್ಕಾಳ, ಹುಲಗಬಾಳ, ಸಂಕೋನಟ್ಟಿ ಗ್ರಾಮಗಳಿಗೆ ಕೃಷ್ಣಾ ನದಿಯಿಂದ ಕುಡಿಯುವ ನೀರು ಪೂರೈಕೆ ಸಾಧ್ಯವಾಗಿ ಸ್ಥಳೀಯರಿಗೆ ಅನುಕೂಲವಾಗಲಿದೆ ಎಂದು ಸವದಿಯವರು ವಿವರಿಸಿದರು.

Read More Articles