50 ವರ್ಷದ ಸಂಭ್ರಮ: ಮನೆ ಮನೆಗಳಲ್ಲಿ ಕನ್ನಡ ಬಾವುಟ ಹಾರಿಸಲು ಸರ್ಕಾರ ಮನವಿ
ಬೆಂಗಳೂರು:ಮಹತ್ವದ ಕನ್ನಡ ರಾಜ್ಯೋತ್ಸವ ಮತ್ತು ಸುವರ್ಣ ಸಂಭ್ರಮ ಸಮಾರೋಪ ಸಮಾರಂಭದ ಪೂರ್ವಭಾವಿ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಿತು. ಸಭೆಯಲ್ಲಿ ಹಲವು ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳಲಾಯಿತು.

ಈ ವರ್ಷ 50 ವರ್ಷಗಳ ಸುವರ್ಣ ಸಂಭ್ರಮವನ್ನು ಅದ್ಧೂರಿಯಾಗಿ ಆಚರಿಸಲು ಸರ್ಕಾರ ವಿಶೇಷ ಯೋಜನೆಗಳನ್ನು ಹಮ್ಮಿಕೊಂಡಿದೆ. ಈ ಸಂಭ್ರಮದ ಅಂಗವಾಗಿ 50 ಸಾಧಕ ಮಹಿಳೆಯರ ಕುರಿತಂತೆ ತಲಾ 100 ಪುಟಗಳ ಪುಸ್ತಕವನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮೂಲಕ ಪ್ರಕಟಿಸಲಾಗುವುದು.

ಮುಖ್ಯ ತೀರ್ಮಾನಗಳು:
ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ದೇವಿಯ 25 ಅಡಿ ಎತ್ತರದ ಕಂಚಿನ ಪ್ರತಿಮೆ: ಈ ಪ್ರತಿಮೆಯನ್ನು ನವೆಂಬರ್ 1 ರಂದು ಅನಾವರಣಗೊಳಿಸಲಾಗುವುದು.
ರಾಜ್ಯದ 4 ವಲಯಗಳಲ್ಲಿ ವಿಶೇಷ ಕಾರ್ಯಕ್ರಮಗಳು: ಮೈಸೂರಿನಲ್ಲಿ ಚಿಂತನಾ ಸಮಾವೇಶ, ರಾಯಚೂರಿನಲ್ಲಿ ಗೋಕಾಕ್ ಚಳವಳಿ ಸಂಸ್ಕರಣೆ, ಮಹಾರಾಷ್ಟ್ರದ ಜತ್ ತಾಲೂಕಿನಲ್ಲಿ ಗಡಿನಾಡು ಸಾಂಸ್ಕೃತಿಕ ಉತ್ಸವ, ಮತ್ತು ಮಂಗಳೂರಿನಲ್ಲಿ ನಾನಾ ಅಕಾಡೆಮಿಯ ಸಹಯೋಗದಲ್ಲಿ ಬಹುಸಂಸ್ಕೃತಿ ಉತ್ಸವ ಆಯೋಜಿಸಲಾಗುವುದು.
ಕನ್ನಡ ಬಾವುಟದ ಪ್ರಚಾರ: ಮನೆ ಮನೆಗಳಲ್ಲಿ ಕನ್ನಡ ಬಾವುಟ ಹಾರಿಸಲು ಸರ್ಕಾರ ಮನವಿ ಮಾಡಿದೆ.
ಕನ್ನಡದ ನುಡಿಮುತ್ತುಗಳ ಪ್ರಚಾರ: ಕನ್ನಡ ಸಾಹಿತಿಗಳ ನುಡಿಮುತ್ತುಗಳನ್ನು ಎಲ್ಲ ಜಿಲ್ಲೆಗಳ ಪ್ರಮುಖ ಸ್ಥಳಗಳಲ್ಲಿ, ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸಲಾಗುವುದು.
ಶಾಲಾ-ಕಾಲೇಜುಗಳಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ: ಈ ಬಾರಿ ಶಾಲಾ ಮತ್ತು ಕಾಲೇಜುಗಳಲ್ಲಿ ಕನ್ನಡ ರಾಜ್ಯೋತ್ಸವವನ್ನು ವಿಭಿನ್ನ ರೀತಿಯಲ್ಲಿ ಆಚರಿಸಲು ಕ್ರಮ ಕೈಗೊಳ್ಳಲಾಗಿದೆ.










