ಕೊರೋನಾ ವೈರಸ್ ವ್ಯಾಪಕವಾಗಿ ಹರಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳೇ ಕಾರಣ; ಮಾಜಿ ಸಂಸದ ದೃವನಾರಾಯಣ ವಾಗ್ದಾಳಿ
- 14 Jan 2024 , 11:31 PM
- Belagavi
- 122
ಬೆಳಗಾವಿ : ಮಹಾಮಾರಿ ಕೊರೋನಾ ವೈರಸ್ ನಿಯಂತ್ರಣ ಮಾಡುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ವಿಫಲವಾಗಿದೆ ಎಂದು ಮಾಜಿ ಸಂಸದ ದೃವನಾರಾಯಣ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗುರುವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಈಗಾಗಲೇ ರಾಜ್ಯದಲ್ಲಿ ಹದಿನೈದು ಸಾವಿರ ಕೊರೋನಾ ವಾರಿಯರ್ಸ್‌ಗೆ ತರಬೇತಿ ನೀಡಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ವಾರಿಯರ್ಸ್ ಗಳನ್ನು ಆಯ್ಕೆ ಮಾಡಲಾಗಿದ್ದು ಅವರಿಗೆ ಮುಂಜಾಗ್ರತಾ ಕ್ರಮವಾಗಿ ಒಂದು ಲಕ್ಷ ರೂ. ಇನ್ಸೂರೆನ್ಸ್ ಮಾಡಿಸಲಾಗಿದೆ.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ವತಿಯಿಂದ ಆರೋಗ್ಯ ಹಸ್ತ ಕಾರ್ಯಕ್ರಮ ಮಾಡಲಾಗುತ್ತಿದೆ. ಕೊರೋನಾ ಸೋಂಕು ನಿಯಂತ್ರಿಸುವಲ್ಲಿ ಸರಕಾರ ವಿಫಲವಾಗಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ರಾಜ್ಯದ ಮೂಲೆ ಮೂಲೆಗಳಲ್ಲಿ ಕೊರೋನಾ ತಪಾಸಣೆ ನಡೆಸಲಾಗುವುದು. ಮೊದಲೇ ಮುಂಜಾಗ್ರತಾ ಕ್ರಮವಾಗಿ ವಿದೇಶದಿಂದ ಬರುವವರ ಮೇಲೆ ನಿಗಾವಹಿಸಿದ್ದರೆ ಕೊರೋನಾ ಸೋಂಕು ಹೆಚ್ಚಾಗುತ್ತಿರಲಿಲ್ಲ. ಕೊರೋನಾ ಸೋಂಕು ಹೆಚ್ಚಳವಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆ ಕಾರಣ ಎಂದು ಆರೋಪಿಸಿದರು.

ರಾಜ್ಯದಲ್ಲಿ ಹೇಳಿಕೆಗೆ ಮಾತ್ರ ಸೀಮಿತವಾದ ಸರಕಾರ ಇದೆ. ಕೊರೋನಾ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಗಳು ಸುಲಿಗೆ ಮಾಡುತ್ತಿವೆ. ಕೋವಿಡ್ -19 ಸೋಂಕಿನಿಂದ ಜನರ ಆರ್ಥಿಕ ಪರಿಸ್ಥಿತಿ ಸರಿ ಇಲ್ಲ.
ಇದರ ನಡುವೆ ರಾಜ್ಯ ಸರಕಾರ 33 ಸಾವಿರ ಕೋಟಿ ರೂಪಾಯಿ ಸಾಲ ಪಡೆಯಲು ಹೊರಟ್ಟಿರುವುದು ದುರ್ದೈವದ ಸಂಗತಿ ಎಂದು ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಸದಾನಂದ ಡಂಗನ್ನವರ, ನಗರಾಧ್ಯಕ್ಷ ರಾಜು ಸೇಠ್, ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.










