ಸಂತ್ರಸ್ತರಿಗೆ ತ್ವರಿತವಾಗಿ ಪರಿಹಾರ ಕಲ್ಪಿಸಲಾಗುವುದು; ಸಚಿವೆ ಶಶಿಕಲಾ ಜೊಲ್ಲೆ

ವಿಜಯಪುರ: ನೆರೆ ನೀರು ನುಗ್ಗಿ ಮನೆ ಹಾನಿಗೊಳಗಾದ ಸಂತ್ರಸ್ತರ ಪೈಕಿ ಈಗಾಗಲೇ 525 ಮನೆಗಳಿಗೆ ತಾತ್ಕಾಲಿಕವಾಗಿ ಹತ್ತು ಸಾವಿರ ರೂ. ಪರಿಹಾರ ನೀಡಲಾಗಿದ್ದು, ಇನ್ನೂ ಪರಿಹಾರ ನೀಡುವ ಕಾರ್ಯ ಪ್ರಗತಿಯಲ್ಲಿದೆ. ಸಂಪೂರ್ಣವಾಗಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ 5 ಲಕ್ಷ ರೂ. ಪರಿಹಾರ ಧನ ಹಾಗೂ ಮನೆ ದುರಸ್ತಿ ಮಾಡಲು 50 ಸಾವಿರ ರೂ. ಪರಿಹಾರ ಧನ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಆಲಮಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ಹೇಳಿದರು. ಹವಾಮಾನ ವೈಪರೀತ್ಯದಿಂದಾಗಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ವಿಜಯಪುರ ಜಿಲ್ಲೆಗೆ ಭೇಟಿ ನೀಡಬೇಕಾಗಿದ್ದ ಕಾರ್ಯಕ್ರಮ ರದ್ದಾಗಿದೆ. ನಾಳೆ ಸಚಿವ ಸಂಪುಟ ಸಭೆ ಇರುವ ಕಾರಣ ಅಲ್ಲಿಯೇ ಚರ್ಚೆ ಮಾಡಿ, ಇನ್ನೊಮ್ಮೆ ಜಿಲ್ಲೆಗೆ ಬರಲು ಮನವಿ ಮಾಡುತ್ತೇನೆ ಈಗಾಗಲೇ ನಡೆಸಿದ ಸಮೀಕ್ಷೆ ಪ್ರಕಾರ ಎಷ್ಟು ಅನುದಾನ ನೀಡಬೇಕೆಂದು ವರದಿ ನೀಡಿ, ತ್ವರಿತವಾಗಿ ಪರಿಹಾರ ಕಲ್ಪಿಸಲಾಗುವುದು ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಈ ಸಂದರ್ಭದಲ್ಲಿ ಶಾಸಕ ಸೋಮನಗೌಡ ಪಾಟೀಲ,ಮಾಜಿ ಸಚಿವ ಎಸ್.ಕೆ ಬೆಳ್ಳುಬಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ಆರ್.ಎಸ್ ಪಾಟೀಲ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ವಿಜುಗೌಡ ಪಾಟೀಲ, ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ, ಜಿ.ಪಂ.ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

promotions

promotions

Read More Articles