ಜ್ಞಾನತಾಣ ಕಾರ್ಯಕ್ರಮ ಉದ್ಘಾಟಿಸಿದ ಸಚಿವೆ ಶಶಿಕಲಾ ಜೊಲ್ಲೆ
- 15 Jan 2024 , 6:12 AM
- Belagavi
- 146
ಚಿಕ್ಕೋಡಿ: ತಾಲೂಕಿನ ಕರೋಶಿ ಗ್ರಾಮದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿದ್ದ, ಗ್ರಾಮೀಣ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮದಲ್ಲಿ ಅಂತರ್ಜಾಲ ಶಿಕ್ಷಣ ವ್ಯವಸ್ಥೆ ಕುರಿತಾಗಿ “ಜ್ಞಾನತಾಣ” ಕಾರ್ಯಕ್ರಮವನ್ನು ಸಚಿವೆ ಶಶಿಕಲಾ ಜೊಲ್ಲೆ ಉದ್ಘಾಟಿಸಿದರು. ನಂತರ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆಯವರ ನೇತೃತ್ವದ ತಂಡ ಸಮಾಜದ ಏಳಿಗೆಗೆ ಉತ್ತಮ ಸೇವೆ ಒದಗಿಸುತ್ತಿದ್ದು, ಕಳೆದ 10 ವರ್ಷಗಳಿಂದ ನಮ್ಮ ಉತ್ತರ ಕರ್ನಾಟಕದ ಜಿಲ್ಲೆಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಹಲವಾರು ಕೊಡುಗೆಗಳನ್ನು ನೀಡುತ್ತಿದ್ದಾರೆ. ಹೀಗಾಗಿ ಅವರ ಸೇವಾ ಕಾರ್ಯಕ್ಕೆ ಮನಃಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದರು. ಬಳಿಕ ಗ್ರಾಮೀಣ ಭಾಗದ ಧರ್ಮಸ್ಥಳ ಸ್ವಸಹಾಯ ಸಂಘದ ಸದಸ್ಯರ ಮಕ್ಕಳಿಗೆ ಹಾಗೂ 5 ರಿಂದ 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಟ್ಯಾಬ್, ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಅನ್ನು ರಿಯಾಯಿತಿ ದರದಲ್ಲಿ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಜಿಲ್ಲಾ ನಿರ್ದೇಶಕ ಕೃಷ್ಣಾ.ಟಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಮಹೇಶ ಭಾತೆ, ವಿದ್ಯಾರ್ಥಿಗಳು, ಗ್ರಾಮಸ್ಥರು ಹಾಗೂ ಇನ್ನೀತರರು ಉಪಸ್ಥಿತರಿದ್ದರು.












