2-3 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ನನಗೆ ತಿಳಿಯಲಿದೆ; ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ
- 14 Jan 2024 , 11:35 PM
- Bengaluru
- 93
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಈಗಾಗಲೇ ಪಕ್ಷದ ವರಿಷ್ಠರ ಜತೆ ಚರ್ಚಿಸಿ ಬಂದಿದ್ದೇನೆ. ಇನ್ನು 2-3 ದಿನಗಳಲ್ಲಿ ನನಗೆ ಗೊತ್ತಾಗಲಿದೆ, ಕೇಂದ್ರ ನಾಯಕರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಹೊಯ್ಸಳ ಕ್ಯಾಬ್ ' ಸೇವೆಗೆ ಚಾಲನೆ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು , ನಮ್ಮ ನಾಯಕರ ಜೊತೆ ಮಾತನಾಡಿದ್ದೇನೆ, ಅವರು ಇನ್ನೆರಡು ಮೂರು ದಿನಗಳಲ್ಲಿ ತೀರ್ಮಾನ ಹೇಳಲಿದ್ದಾರೆ, ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗುತ್ತೇನೆ ಎಂದರು . ಸಚಿವ ಸಂಪುಟ ವಿಸ್ತರಣೆ ಸಂಬಂಧ ನಿನ್ನೆ ದೆಹಲಿಗೆ ಹೋಗಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ 20 ನಿಮಿಷಗಳ ಕಾಲ ಚರ್ಚೆ ನಡೆಸಿ ಬರಿಗೈಯಲ್ಲಿ ವಾಪಸ್ಸಾಗಿದ್ದಾರೆ. ಪ್ರಧಾನಿ ಮೋದಿಯವರನ್ನಾಗಲಿ , ಅಮಿತ್ ಶಾ ಅವರ ಭೇಟಿಗೆ ಅವಕಾಶ ಸಿಗಲಿಲ್ಲ. ಸಂಪುಟ ವಿಸ್ತರಣೆಗೆ ಹೈಕಮಾಂಡ್ ನಿಂದ ಯಾವುದೇ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ. ಜೆ ಪಿ ನಡ್ಡಾ ಅವರ ಜೊತೆ ಚರ್ಚಿಸುವಾಗ ಸಚಿವಾಕಾಂಕ್ಷಿಗಳ ಪಟ್ಟಿಯನ್ನು ಯಡಿಯೂರಪ್ಪನವರು ನೀಡಿದ್ದಾರೆ ಎಂದು ತಿಳಿದುಬಂದಿದೆ.












