ಬೆಳಗಾವಿ: ನಾಳೆ ನಡೆಯುವ ಎರಡನೇ ಹಂತದ ಪಂಚಾಯತಿ ಚುನಾವಣೆಗೆ ಸಕಲ ಸಿದ್ಧತೆ ಮಾಡಿದ್ದಾರೆ. ಈಗಾಗಲೇ ಕೆಲವು ತಾಲೂಕಿನಲ್ಲಿ ಮೊದಲ ಹಂತದ ಮತದಾನ ಪ್ರಕ್ರಿಯೆ ಮುಗಿದಿದ್ದು, ನಾಳೆ ಎರಡನೇ ಹಂತದಲ್ಲಿ ಏಳು ತಾಲ್ಲೂಕುಗಳಲ್ಲಿ ನಡೆಯಲಿರುವ ಚುನಾವಣೆಗೆ ಒಟ್ಟು 1789 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
ಚಿಕ್ಕೋಡಿ, ರಾಯಬಾಗ, ಅಥಣಿ, ಕಾಗವಾಡ, ನಿಪ್ಪಾಣಿ, ರಾಮದುರ್ಗ ಮತ್ತು ಸವದತ್ತಿ ತಾಲ್ಲೂಕುಗಳಲ್ಲಿ ಮತದಾನ ನಡೆಯಲಿದೆ. ಈ ಹಿನ್ನೆಯಲ್ಲಿ ಚಿಕ್ಕೋಡಿ ಮತ್ತು ರಾಯಬಾಗ ತಾಲ್ಲೂಕುಗಳಿಗೆ ಇಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಭೇಟಿ ನೀಡಿ ಮಸ್ಟರಿಂಗ್, ಮತ ಎಣಿಕೆ ಕೇಂದ್ರ ಹಾಗೂ ಸ್ಟ್ರಾಂಗ್ ರೂಮ್ ಸೇರಿದಂತೆ ಚುನಾವಣೆಯ ಸಿದ್ಧತೆಗಳನ್ನು ಪರಿಶೀಲಿಸಿದರು.
ಚುನಾವಣಾ ಪ್ರಕ್ರಿಯೆ ಸುಸೂತ್ರವಾಗಿ ನಡೆಯುವಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಮತದಾನದ ಬಳಿಕ ಮತ ಎಣಿಕೆ ಕೇಂದ್ರಗಳಿಗೆ ಅಗತ್ಯ ಭದ್ರತೆ ಕಲ್ಪಿಸುವುದು ಸೇರಿದಂತೆ ಮತ ಎಣಿಕೆಗೆ ಅಗತ್ಯವಿರುವ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹಿರೇಮಠ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.