ಬೆಳಗಾವಿ:ವ್ಯಾಪಕವಾಗಿ ಹರಡುತ್ತಿರುವ ಕೋವಿಡ್-೧೯ ನಿಯಂತ್ರಣಕ್ಕಾಗಿ ವಿಶೇಷಾಧಿಕಾರಿಗಳನ್ನು ನೇಮಿಸುವುದರ ಜತೆಗೆ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಸಂಜೆ ಅಧಿಕಾರಿಗಳ ಜತೆ ನಡೆದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು. ಕೋವಿಡ್ ನಿಯಂತ್ರಣಕ್ಕಾಗಿ ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಬಹು ಮುಖ್ಯವಾಗಿದೆ. ಆದರೆ ಸಾರ್ವಜನಿಕ ಸ್ಥಳಗಳು, ಮಾರುಕಟ್ಟೆಗಳು ಮತ್ತಿತರ ಕಡೆಗಳಲ್ಲಿ ಕೋವಿಡ್ ಮಾರ್ಗಸೂಚಿ ಸರಿಯಾಗಿ ಪಾಲನೆ ಆಗದಿರುವುದು ಕಂಡುಬಂದಿದೆ.
ಆದ್ದರಿಂದ ಕೋವಿಡ್ ಮಾರ್ಗಸೂಚಿ ಅನುಷ್ಠಾನದ ಜತೆಗೆ ಜನರಲ್ಲಿ ಜಾಗೃತಿ ಮೂಡಿಸಲು ವಿಶೇಷಾಧಿಕಾರಿಗಳ ನೇಮಕ ಮಾಡಲು ನಿರ್ಧರಿಸಲಾಗಿದೆ. ಹೀಗೆ ನೇಮಿಸಲಾಗುವ ವಿಶೇಷಾಧಿಕಾರಿಗಳು ತಮಗೆ ನಿಗದಿಪಡಿಸುವ ವ್ಯಾಪ್ತಿಯಲ್ಲಿ ಸರಕಾರ ಕಾಲಕಾಲಕ್ಕೆ ಹೊರಡಿಸುವ ಕೋವಿಡ್ ಮಾರ್ಗಸೂಚಿ ಪಾಲನೆಯನ್ನು ಖಚಿತಪಡಿಸುವ ಮೂಲಕ ಸೋಂಕು ನಿಯಂತ್ರಣಕ್ಕೆ ಮುಂದಾಗಬೇಕು ಎಂದು ತಿಳಿಸಿದರು.
ಪ್ರಚಾರಕ್ಕೆ ಕೋವಿಡ್ ಮಾರ್ಗಸೂಚಿ ಅನ್ವಯ: ಜಿಲ್ಲೆಯ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ಎಂಟು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪ್ರಚಾರಸಭೆ ಮತ್ತಿತರ ಚಟುವಟಿಕೆಗಳಿಗೆ ಸಹಾಯಕ ಚುನಾವಣಾಧಿಕಾರಿಗಳು ಕೋವಿಡ್ ಮಾರ್ಗಸೂಚಿ ಅನುಸರಿಸಿ ಅನುಮತಿಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ತಿಳಿಸಿದರು.
ಹೀಗೆ ಅನುಮತಿ ನೀಡಿದ ಬಳಿಕ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆಯ ಬಗ್ಗೆಯೂ ಸಂಬಂಧಿಸಿದ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ಹೇಳಿದರು. ಇದೇ ವೇಳೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಕೋವಿಡ್ ನಿಯಮ ಉಲ್ಲಂಘಿಸುವವರ ವಿರುದ್ಧ ನಿಯಮಾವಳಿ ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಮಹಾನಗರ ಪಾಲಿಕೆಯ ಆಯುಕ್ತರಾದ ಜಗದೀಶ್, ಡಿಸಿಪಿ ಚಂದ್ರಶೇಖರ ನೀಲಗಾರ, ಉಪ ವಿಭಾಗಾಧಿಕಾರಿ ಅಶೋಕ ತೇಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ ಮತ್ತಿತರರು ಉಪಸ್ಥಿತರಿದ್ದರು. ಉಪ ಚುನಾವಣೆ ಕ್ಷೇತ್ರದ ವ್ಯಾಪ್ತಿಯ ಸಹಾಯಕ ಚುನಾವಣಾಧಿಕಾರಿಗಳು, ಜಿಲ್ಲೆಯ ಎಲ್ಲ ತಹಶೀಲ್ದಾರರು, ತಾಲ್ಲೂಕು ಆರೋಗ್ಯಾಧಿಕಾರಿಗಳು ಮತ್ತಿತರರು ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದರು.