ಉಪ ಚುನಾವಣೆ: ಮತ ಎಣಿಕೆ ‌ಕೇಂದ್ರ ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್

  • 14 Jan 2024 , 11:07 PM
  • Belagavi
  • 136

ಬೆಳಗಾವಿ: ಲೋಕಸಭಾ ಉಪ ಚುನಾವಣೆ ಹಿನ್ನೆಲೆಯಲ್ಲಿ ನಗರದ ಆರ್.ಪಿ.ಡಿ. ಮಹಾವಿದ್ಯಾಲಯದಲ್ಲಿ ಸ್ಟ್ರಾಂಗ್ ರೂಮ್ ನಿರ್ಮಾಣ ಹಾಗೂ ಮತ ಎಣಿಕೆ ಕೇಂದ್ರಗಳ ಸಿದ್ಧತೆಗಳನ್ನು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಪರಿಶೀಲಿಸಿದರು.

ಮತ ಎಣಿಕೆ‌ ಕೇಂದ್ರಕ್ಕೆ ಗುರುವಾರ (ಏ.1) ಭೇಟಿ ನೀಡಿದ ಅವರು, ಸ್ಟ್ರಾಂಗ್ ರೂಮ್ ನಿರ್ಮಾಣ ಕಾಮಗಾರಿ ಸೇರಿದಂತೆ ವಿವಿಧ ಸಿದ್ಧತೆಗಳನ್ನು ವೀಕ್ಷಿಸಿದರು. ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಸ್ಟ್ರಾಂಗ್ ರೂಮ್ ನಿರ್ಮಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸ್ಟ್ರಾಂಗ್ ರೂಮ್ ಹಾಗೂ ಮತ ಎಣಿಕೆ ಕೇಂದ್ರಕ್ಕೆ ಗುರುತಿಸಲಾಗಿರುವ ಪ್ರತಿಯೊಂದು ಕೊಠಡಿಗಳನ್ನು ಪರಿಶೀಲಿಸಿದ ಅವರು, ನಿಗದಿತ ಸಮಯದೊಳಗೆ ಎಲ್ಲ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು. ಮತ ಎಣಿಕೆ ದಿನ ಅಗತ್ಯವಿರುವ ಸಾಮಗ್ರಿಗಳನ್ನು ಕೂಡ ಮುಂಚಿತವಾಗಿಯೇ ಸಿದ್ಧವಾಗಿಟ್ಟುಕೊಳ್ಳುವಂತೆ ತಿಳಿಸಿದರು.

ಭದ್ರತಾ ವ್ಯವಸ್ಥೆ, ಬ್ಯಾರಿಕೇಡಿಂಗ್, ಚುನಾವಣಾ ವೀಕ್ಷಕರ ವಿಶೇಷ ಕೊಠಡಿಗಳು, ಮಾಧ್ಯಮ ಕೇಂದ್ರ ಸೇರಿದಂತೆ ಪ್ರತಿಯೊಂದು ವ್ಯವಸ್ಥೆಯನ್ನು ಅಚ್ಚುಕಟ್ಟಾಗಿರುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್ ತಿಳಿಸಿದರು.

ಮತ ಎಣಿಕೆ ಕೇಂದ್ರದ ಸಿದ್ಧತೆಗಳ ಕುರಿತು ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾದ ಸಂಜೀವ್ ಕುಮಾರ್ ಹುಲಕಾಯಿ ಮಾಹಿತಿಯನ್ನು ನೀಡಿದರು. ಅಪರ ಜಿಲ್ಲಾಧಿಕಾರಿ ಯೋಗೇಶ್ವರ್ ಎಸ್., ಉಪ ವಿಭಾಗಾಧಿಕಾರಿ ಅಶೋಕ ತೇಲಿ ಮತ್ತಿತರ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read All News