ಕೋವಿಡ್-19 ಮಾರ್ಗಸೂಚಿ ಕಟ್ಟುನಿಟ್ಟಾಗಿ ಅನುಷ್ಠಾನ: ಡಿಸಿ ಹರೀಶ್‌ಕುಮಾರ

  • 30 Dec 2023 , 12:01 PM
  • Belagavi
  • 156

ಬೆಳಗಾವಿ: ವಿಶ್ವ ಆರೋಗ್ಯ ಸಂಸ್ಥೆಯು ಈಗಾಗಲೇ ಸಾಂಕ್ರಾಮಿಕ ರೋಗವೆಂದು ಘೋಷಿಸಿರುವ ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ಜಿಲ್ಲೆಯಲ್ಲಿಯೂ ಈ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಿದಾಗ, ಕಳೆದ ಒಂದು ತಿಂಗಳ ಅವಧಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ನಿರಂತರವಾಗಿ ಏರಿಕೆ ಆಗುತ್ತಿದು, ಬೃಹತ್ ಸಂಖ್ಯೆಯಲ್ಲಿ ನಡೆಯುತ್ತಿರುವ ಸಾಮಾಜಿಕ, ಧಾರ್ಮಿಕ ಹಾಗೂ ಸಾರ್ವಜನಿಕ ಸಭೆ ಸಮಾರಂಭಗಳು, ಮದುವೆಗಳು, ರಾಜಕೀಯ ರ್ಯಾಲಿ ಇತರೆ ಸಂದರ್ಭಗಳಲ್ಲಿ ಸೇರಬಹುದಾದ ಸಾರ್ವಜನಿಕರ ಸಂಖ್ಯೆಯನ್ನು ಮಿತಿಗೊಳಿಸಿಗೊಳಿಸಲು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಕೋವಿಡ್ ತಡೆಗೆ ಮುಂಜಾಗ್ರತಾ ಕ್ರಮಗಳು:

ವಿದ್ಯಾಗಮವೂ ಸೇರಿದಂತೆ 6-8 ನೇ ತರಗತಿಗಳನ್ನು ಸ್ಥಗಿತಗೊಳಿಸಲಾಹಿರುತ್ತದೆ. 10,11 ಮತ್ತು 12 ನೇ ತರಗತಿಗಳು ನಡೆಯುತ್ತಿದ್ದು, ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಾಗಿರುವುದಿಲ್ಲ. ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಕೋರ್ಸ್ ಗಳ ತರಗತಿಗಳಲ್ಲಿ ಮಂಡಳಿಯ/ ವಿಶ್ವವಿದ್ಯಾಲಯಗಳ ಪರೀಕ್ಷೆ ಬರೆಯುವ ಹಾಗೂ ವೈದ್ಯಕೀಯ ಶಿಕ್ಷಣದ ತರಗತಿಗಳನ್ನು ಹೊರತುಪಡಿಸಿ ಎಲ್ಲಾ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ. ವಸತಿ ಶಾಲೆಗಳು ಹಾಗೂ ಬೋರ್ಡಿಂಗ್ ಇರುವ ಶಾಲೆಗಳಲ್ಲಿ 10,11 ಹಾಗೂ 12ನೇ ತರಗತಿಯ ಬೋರ್ಡ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು, ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಕೋರ್ಸ್ ಗಳ ವಿಶ್ವವಿದ್ಯಾಲಯಗಳ ಪರೀಕ್ಷೆ ಬರೆಯುವರು ಮತ್ತು ವೈದ್ಯಕೀಯ ಶಿಕ್ಷಣದ ತರಗತಿಗಳನ್ನು ಹೊರತುಪಡಿಸಿ, ಇತರ ಎಲ್ಲಾ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ.

ಧಾರ್ಮಿಕ ಸ್ಥಳಗಳಲ್ಲಿ ವೈಯಕ್ತಿಕವಾಗಿ ಪ್ರಾರ್ಥನೆ ಮಾಡಲು ಅವಕಾಶವಿರುತ್ತದೆ ಆದರೆ ಗುಂಪು ಸೇರುವ ಕಾರ್ಯಕ್ರಮಗಳಿಗೆ ಅವಕಾಶವಿರುವುದಿಲ್ಲ. ಅಪಾರ್ಟ್ ಮೆಂಟ್, ಕಾಂಪ್ಲೆಕ್ಸ್ ಗಳಲ್ಲಿ ಸಾಮಾನ್ಯವಾಗಿ ನಿವಾಸಿಗಳು/ಜನರು ಸೇರುವ ಸ್ಥಳಗಳಾದ ಜಿಮ್, ಪಾರ್ಟಿ ಹಾಲ್ ಗಳು, ಕ್ಲಬ್ ಹೌಸ್ ಗಳು ಸೇರಿದಂತೆ ಈಜುಕೊಳ ಇತ್ಯಾದಿ ಮುಚ್ಚಲ್ಪಟ್ಟಿರುತ್ತದೆ.

ರ್ಯಾಲಿ, ಮುಷ್ಕರ ಧರಣಿ ನಿಷೇಧ:

ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿಯ ಪ್ರಕಾರ ರ್ಯಾಲಿಗಳು, ಮುಷ್ಕರದ ಧರಣಿ ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕ ಸಾರಿಗೆಗಳಲ್ಲಿ ಪ್ರಯಾಣಿಕರ ಸಂಖ್ಯೆಯೂ ನಿಗದಿಪಡಿಸಿರುವ ಆಸನದ ವ್ಯವಸ್ಥೆಯನ್ನು ಮೀರುವಂತಿಲ್ಲ. ಕಛೇರಿಗಳು ಹಾಗೂ ಇತರ ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಸಾಧ್ಯವಾದಷ್ಟು ಮನೆಯಿಂದಲೇ ಕೆಲಸ ನಿರ್ವಹಿಸುವ ಅಭ್ಯಾಸವನ್ನು ಪಾಲಿಸುವುದು.

ಕೋವಿಡ್ ಮುನ್ನೆಚ್ಚರಿಕಾ ಕ್ರಮವಾಗಿ( ಸೂಕ್ತ ವರ್ತನೆಗಳು) ಕಡ್ಡಾಯವಾಗಿ ಮುಖಗವಸು, ದೈಹಿಕ ಅಂತರ ಪಾಲನೆ, ಹ್ಯಾಂಡ್ ಸ್ಯಾನಿಟೈಸರ್ ಹಾಗೂ ಹ್ಯಾಂಡ್ ವಾಷ್ ಗಳ ಬಳಕೆಗಳನ್ನು ಜಾರಿಗೊಳಿಸಲಾಗಿರುತ್ತದೆ. ಶಾಪಿಂಗ್ ಮಾಲ್ ಗಳು, ಮುಚ್ಚಿದ ಪ್ರದೇಶಗಳಲ್ಲಿರುವ ಮಾರ್ಕೆಟ್ ಗಳು ಹಾಗೂ ಡಿಪಾರ್ಟ್ಮಂಟಲ್ ಸ್ಟೋರ್ ಗಳಲ್ಲಿ ಶಿಷ್ಟಾಚಾರದನ್ವಯ ಕೋವಿಡ್ ಮುನ್ನೆಚ್ಚರಿಕೆಗಾಗಿ ಸೂಕ್ತ ನಿಯಮ ಪಾಲಿಸಬೇಕು.

ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಆಚರಣೆಗಳು ಹಾಗೂ ಜಾತ್ರೆ ಮಹೋತ್ಸವಗಳು, ಮೇಳಗಳು, ಗುಂಪು ಸೇರುವುದರ ನಿಷೇಧ ಮುಂದುವರೆಯುತ್ತದೆ. ವಿವಿಧ ಸಭೆ-ಸಮಾರಂಭ ಆಚರಣೆಗಳಲ್ಲಿ ಭಾಗವಹಿಸಲು ಅವಕಾಶ ನೀಡಬಹುದಾದ ಸಾರ್ವಜನಿಕರ ಸಂಖ್ಯೆಯನ್ನು ದಿ. 12.03.21 ಸುತ್ತೋಲೆಯಂತೆ ಮುಂದುವರಿಸಲಾಗುವುದು.

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ದೈಹಿಕ ಅಂತರವನ್ನು ಕಾಪಾಡಿಕೊಳ್ಳುವುದು ಇವುಗಳಿಗೆ ಸಂಬAಧಪಟ್ಟAತೆ ಈಗಾಗಲೇ ಜಾರಿಯಲ್ಲಿರುವ ನಿಯಮ ಆದೇಶಗಳನ್ನು ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಆಡಳಿತಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವುದು.

ಕೋವಿಡ್ 19 ರ ಸಂದರ್ಭದಲ್ಲಿ ಮುನ್ನೆಚ್ಚರಿಕೆ ಕ್ರಮಗಳು ಮತ್ತು ಸೂಕ್ತ ವರ್ತನೆಗಳು ಪಾಲನೆಯಾಗದ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005 ರ ವಿಭಾಗ 51-60ರ ಅನ್ವಯ; ಐ.ಪಿ.ಸಿ ಸೆಕ್ಷನ್ 188 ರಂತೆ ಹಾಗೂ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ, 2020 ವಿಭಾಗ 4,5 ಸೇರಿದಂತೆ 10 ರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.

ಅದೇ ರೀತಿ ಸರ್ಕಾರದ ಹೊಸ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read All News