ಬೆಳಗಾವಿ :ಮಹಾನಗರ ಪಾಲಿಕೆ ಚುನಾವಣೆಯನ್ನು ಪಾರದರ್ಶಕ, ಮುಕ್ತ, ನ್ಯಾಯಸಮ್ಮತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವುದು ನಮ್ಮ ಜವಾಬ್ದಾರಿ. ಆದ್ದರಿಂದ ನ್ಯಾಯಯುತ ಚುನಾವಣೆ ನಡೆಸಲು ಎಲ್ಲರೂ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತರಾದ ಡಾ.ಬಿ.ಬಸವರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಹಾನಗರ ಪಾಲಿಕೆ ಚುನಾವಣೆ-2021 ಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ(ಆ.26) ನಡೆದ ಜಿಲ್ಲಾ ಚುನಾವಣಾಧಿಕಾರಿ, ಪೊಲೀಸ್ ಆಯುಕ್ತರು ಸೇರಿದಂತೆ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳು, ಸಾಮಾನ್ಯ ವೀಕ್ಷಕರು ಮತ್ತು ಚುನಾವಣಾ ವಿವಿಧ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಸಾಮಾನ್ಯ ವೀಕ್ಷಕರು, ವೆಚ್ಚ ವೀಕ್ಷಕರು ಹಾಗೂ ಮಾದರಿ ನೀತಿಸಂಹಿತೆ ನೋಡಲ್ ಅಧಿಕಾರಿಗಳು ಹೆಚ್ಚು ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು.
ಅಭ್ಯರ್ಥಿಗಳಿಗೆ ನಿಯಮಾವಳಿಗಳ ಕುರಿತು ತಿಳಿವಳಿಕೆ ಮೂಡಿಸುವ ಮೂಲಕ ಗೊಂದಲಗಳನ್ನು ಪರಿಹರಿಸಲು ಮುಂದಾಗಬೇಕು. ಮನೆ-ಮನೆಗೆ ತೆರಳಿ ಪ್ರಚಾರಕ್ಕೆ ಮಾತ್ರ ಅವಕಾಶ ನೀಡಿರುವುದರಿಂದ ಚುನಾವಣಾ ಪ್ರಚಾರದ ವೇಳೆ ನಡೆಯಬಹುದಾದ ಅಕ್ರಮಗಳ ಮೇಲೆ ನಿಗಾ ವಹಿಸಬೇಕು.
ಚುನಾವಣಾ ಕಾರ್ಯದಲ್ಲಿ ನಿಯೋಜಿತ ಎಲ್ಲ ಅಧಿಕಾರಿಗಳು ತಮಗೆ ನೀಡಲಾದ ಅಧಿಕಾರಗಳನ್ನು ಬಳಸಿಕೊಂಡು ನ್ಯಾಯಸಮ್ಮತ ಚುನಾವಣೆಗೆ ಅವಕಾಶ ಕಲ್ಪಿಸಬೇಕು ಎಂದು ಚುನಾವಣಾ ಆಯೋಗದ ಆಯುಕ್ತ ಬಸವರಾಜು ಸಲಹೆ ನೀಡಿದರು.
ಪ್ರಚಾರಕ್ಕೆ ಸಂಬಂಧಿಸಿದಂತೆ ಆಯೋಗದ ನಿರ್ದೇಶನಗಳನ್ನು ಸಮರ್ಪಕವಾಗಿ ಪಾಲಿಸಬೇಕು. ಪ್ರಚಾರ ಮಾರ್ಗಸೂಚಿಗಳನ್ನು ಪಾಲನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ನಿಗಾವಹಿಸಬೇಕು. ಚುನಾವಣಾ ಪ್ರಕ್ರಿಯೆಯಲ್ಲಿ ಯಾವುದೇ ಲೋಪದೋಷಗಳು ಉಂಟಾಗದಂತೆ ಎಚ್ಚರಿಕೆ ವಹಿಸಬೇಕು.
ಮಾದರಿ ನೀತಿಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳಬೇಕು. ಕಾನೂನು ಸುವ್ಯವಸ್ಥೆ ಹಾಗೂ ಒಟ್ಟಾರೆ ಚುನಾವಣಾ ಪ್ರಕ್ರಿಯೆ ಮೇಲೆ ನಿಗಾ ವಹಿಸಬೇಕು.
ಚುನಾವಣಾ ಕಾರ್ಯದ ಲೋಪದೋಷಗಳನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ. ಆದ್ದರಿಂದ ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ಹಣಬಲ, ತೋಳ್ಬಲಕ್ಕೆಆಸ್ಪದನೀಡದೇ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು. ಅಬಕಾರಿ ಅಕ್ರಮಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಬೇಕು. ಮದ್ಯ ಮಾರಾಟ ಮತ್ತು ಸಾಗಾಣಿಕೆ ಮೇಲೆ ನಿಗಾ ವಹಿಸಬೇಕು ಎಂದು ಸೂಚನೆ ನೀಡಿದರು.
ಕೋವಿಡ್ಮಾರ್ಗಸೂಚಿಪಾಲನೆಗೆಸೂಚನೆ: ಮತದಾನ ಹಾಗೂ ಮತ ಎಣಿಕೆ ಕೇಂದ್ರಗಳಲ್ಲಿ ಕೋವಿಡ್ ಮಾರ್ಗಸೂಚಿ ಪ್ರಕಾರ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ರಾಜ್ಯ ಚುನಾವಣಾ ಆಯುಕ್ತ ಡಾ.ಬಿ.ಬಸವರಾಜು ಸೂಚನೆ ನೀಡಿದರು. ಮಾದರಿ ನೀತಿಸಂಹಿತೆ ಪಾಲನೆ, ಸೆಕ್ಟರ್ ಅಧಿಕಾರಿಗಳ ನಿಯೋಜನೆ, ವಾಹನ ಸೌಲಭ್ಯ ಮತ್ತಿತರ ವಿಷಯಗಳ ಕುರಿತು ಚರ್ಚೆ ನಡೆಸಿದರು. ಚುನಾವಣಾ ಪ್ರಕ್ರಿಯೆಯಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರೂ ಸಮನ್ವಯದಿಂದ ಕೆಲಸ ಮಾಡಬೇಕು.
ಪ್ರತಿಯೊಬ್ಬರ ಕರ್ತವ್ಯವು ಪ್ರಾಮುಖ್ಯತೆ ಹೊಂದಿದೆ. ಸುಗಮ ಮತ್ತು ಪಾರದರ್ಶಕ ಚುನಾವಣೆ ನಡೆಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿಕೊಂಡರು.
ಚುನಾವಣೆಗೆಎಲ್ಲಸಿದ್ಧತೆ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ: ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇವಿಎಂ, ಚುನಾವಣಾ ಸಿಬ್ಬಂದಿ, ತರಬೇತಿ ಸೇರಿದಂತೆ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ವಿವರಿಸಿದರು. ಒಟ್ಟು 4,31,383 ಮತದಾರರಿದ್ದು, 13 ಉಪ ಮತಗಟ್ಟೆಗಳು ಸೇರಿದಂತೆ ಒಟ್ಟಾರೆ 415 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ನಗರದ ಬಿ.ಕೆ.ಮಾಡೆಲ್ ಹೈಸ್ಕೂಲಿನಲ್ಲಿ ಮಸ್ಟರಿಂಗ್ ಹಾಗೂ ಡಿಮಸ್ಟ್ ರಿಂಗ್ ನಡೆಯಲಿದೆ.
ಪ್ರತಿಯೊಂದು ಮತ ಕೇಂದ್ರಗಳಲ್ಲಿ ಕೋವಿಡ್ ಮಾರ್ಗಸೂಚಿ ಪ್ರಕಾರ ವೈದ್ಯಕೀಯ ತಂಡಗಳನ್ನು ಕೂಡ ನಿಯೋಜಿಸಲು ಕ್ರಮ ಕೈಗೊಳ್ಳಲಾಗಿದೆ. ನಾಮಪತ್ರ ವಾಪಸ್ ಪಡೆಯಲು ಆ.26 ಕಡೆಯ ದಿನವಾಗಿದೆ. ಈ ಪ್ರಕ್ರಿಯೆ ಬಳಿಕ ಅಭ್ಯರ್ಥಿಗಳಿಗೆ ಚಿಹ್ನೆಗಳನ್ನು ನೀಡಲಾಗುವುದು. ಚುನಾವಣಾ ಆಯೋಗದ ನಿರ್ದೇಶನದ ಪ್ರಕಾರ ಪ್ರಚಾರ ಕಾರ್ಯಕ್ಕೆ ಅನುಮತಿ ನೀಡಲಾಗಿದೆ. ಕೋವಿಡ್ ಮಾರ್ಗಸೂಚಿ ಹಾಗೂ ಚುನಾವಣಾ ಆಯೋಗದ ನಿರ್ದೇಶನಗಳ ಪಾಲನೆಗೆ ಎಲ್ಲ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಿರೇಮಠ ಹಾಗೂ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರು ವಿವರಿಸಿದರು.
ಅಬಕಾರಿ ಅಕ್ರಮಗಳನ್ನು ತಡೆಗಟ್ಟಲು ಚೆಕ್ ಪೋಸ್ಟ್ ಹಾಗೂ ಕಂಟ್ರೋಲ್ ರೂಮ್ ಗಳನ್ನು ಆರಂಭಿಸಲಾಗಿದೆ ಎಂದು ಅಬಕಾರಿ ಇಲಾಖೆಯ ಉಪ ಆಯುಕ್ತ ಜಯರಾಮೇಗೌಡ ವಿವರಿಸಿದರು. ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್ ಅವರು, ಪಾಲಿಕೆಯ ಚುನಾವಣೆಯ ಹಿನ್ನೆಲೆಯಲ್ಲಿ ತೆಗೆದುಕೊಳ್ಳಲಾಗಿರುವ ಭದ್ರತೆಯ ಕುರಿತು ಮಾಹಿತಿಯನ್ನು ನೀಡಿದರು. ಮಹಾನಗರ ಪಾಲಿಕೆಯ ಆಯುಕ್ತ ಡಾ.ಪ್ರವೀಣ ಬಾಗೇವಾಡಿ, ಚುನಾವಣಾ ವೀಕ್ಷಕರಾದ ಗೀತಾ ಕೌಲಗಿ, ಶಿವನಗೌಡ ಪಾಟೀಲ, ಇವಿಎಂ ನೋಡಲ್ ಅಧಿಕಾರಿ ಬಿ.ಕೆ.ಗೌರಿಶಂಕರ್, ಎಂಸಿಸಿ ನೋಡಲ್ ಅಧಿಕಾರಿ ಮೋಹನ ಶಿವಣ್ಣವರ, ಚುನಾವಣಾ ತರಬೇತುದಾರ ಎನ್.ವಿ.ಶಿರಗಾಂವಕರ, ಮತದಾನ ಹಾಗೂ ಮತ ಎಣಿಕೆ ಕೇಂದ್ರದ ನೋಡಲ್ ಅಧಿಕಾರಿ ಲಕ್ಷ್ಮೀ ನಿಪ್ಪಾಣಿಕರ ಸೇರಿದಂತೆ ಚುನಾವಣೆಗೆ ಸಂಬಂಧಿಸಿದ ವಿವಿಧ ನೋಡಲ್ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.