ಬೆಳಗಾವಿ: ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಪಂಗಡಗಳನ್ನು ಒಳಗೊಂಡಂತೆ ಕೇಂದ್ರದ ಹಿಂದುಳಿದ ವರ್ಗಗಳ ಓಬಿಸಿ ಪಟ್ಟಿಯಲ್ಲಿ 3ಬಿ ಸೇರಿಸುವಂತೆ ಒತ್ತಾಯಿಸಿ ಆ.1ರಂದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷೆ ರತ್ನಪ್ರಭಾ ಬೆಲ್ಲದ ಹೇಳಿದರು.
ಶುಕ್ರವಾರ ನಗರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ವೀರಶೈವ ಲಿಂಗಾಯತ ಬಡ ಮಕ್ಕಳು, ಶಿಕ್ಷಣ, ಉದ್ಯೋಗ, ವಸತಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ಗೋವಾದಲ್ಲಿ ನಮ್ಮ ಸಂಘಟನೆ ಅಸ್ತಿತ್ವದಲ್ಲಿದೆ.
ಎಲ್ಲ ರಾಜ್ಯಗಳಲ್ಲಿಯೂ ಹೋರಾಟ ಮಾಡಿ ಸರಕಾರಕ್ಕೆ ಒತ್ತಾಯಿಸಲಾಗುವುದು ಎಂದರು. ಈಗಾಗಲೇ ರಾಜ್ಯ ಮತ್ತು ಕೇಂದ್ರದ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯಲ್ಲಿ ಸೇರಿರುವ ತಿಗಳ, ಈಡಿಗ, ಒಕ್ಕಲಿಗ, ದೇವಾಂಗ ಮತ್ತು ಬಲಿಜ ಸಮುದಾಯಗಳಿಗಿಂತ ಹಿಂದುಳಿದಿದ್ದರೂ ನಮ್ಮ ಸಮುದಾಯವನ್ನು ಹೊರಗೆ ಇಟ್ಟಿದ್ದಾರೆ ಎಂದರು ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ವೀರಶೈವ ಲಿಂಗಾಯತರಿಗೆ ಮೊದಲ ಆದ್ಯತೆ ನೀಡಬೇಕೆಂದು ಈಗಾಗಲೇ ಸಿಎಂಗೆ ಪತ್ರ ಬರೆದಿದ್ದೇನೆ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ವರ್ಗ, ವರ್ಣ, ಜಾತಿ ರಹಿತ ಸಮಾಜದ ಪರಿಕಲ್ಪನೆಯನ್ನು ಸಮಾಜಕ್ಕೆ ನೀಡಿದ ಬಸವಾದಿ ಶರಣರು ಕೊಟ್ಟ ಮಾರ್ಗದಲ್ಲಿಯೇ ಸಾಗಿದ ವೀರಶೈವ ಲಿಂಗಾಯತ ಸಮಾಜ ಬಾಂಧವರು ಎಲ್ಲರನ್ನು ಒಪ್ಪಿಕೊಂಡು ಬಂದಂಥವರು, ಧರ್ಮದ ಭೇಧವಿಲ್ಲದೆ ಎಲ್ಲ ವರ್ಗದವರಿಗೂ ಶಿಕ್ಷಣ, ವಸತಿ ಮತ್ತು ದಾಸೋಹ ನೀಡುವ ಮೂಲಕ ರಾಷ್ಟ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿದವರು, ಇಂದು ನಮ್ಮ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡುವುದು ಅನಿವಾರ್ಯವಾಗಿದೆ ಎಂದರು.
ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಉಸ್ತುವಾರಿ, ಪದಾಧಿಕಾರಿ ಮಾತನಾಡಿ, ಕೇಂದ್ರ ಸರಕಾರದ ಓಬಿಸಿ ಪಟ್ಟಿಯಲ್ಲಿ ವೀರಶೈವ ಲಿಂಗಾಯತ ಸಮುದಾಯವನ್ನು ಸೇರಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇವಲ ಭರವಸೆ ನೀಡುತ್ತಿದ್ದಾರೆ ವಿನಃ ಕಾರ್ಯರೂಪಕ್ಕೆ ಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. .