ಬೆಳಗಾವಿ: ನಗರದಲ್ಲಿ ಇಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ಪ್ರಧಾನ ಕಾರ್ಯದರ್ಶಿ ದಾದಾಗೌಡ ಬಿರಾದಾರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಮಹಾಂತೇಶ ನಗರದ ವಿವಿಧ ಬಡಾವಣೆಗಳಲ್ಲಿ ಸ್ವಚ್ಛತೆ ಕಾರ್ಯ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ದಾದಾಗೌಡ ಸಾರ್ವಜನಿಕರು ತಮ್ಮ ಮನೆಗಳ ಸುತ್ತಮುತ್ತ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಕಸವನ್ನು ವಿಂಗಡಿಸಿ ಪೌರಕಾರ್ಮಿಕರಿಗೆ ನೀಡಬೇಕು. ಸ್ವಚ್ಛ ಭಾರತದ ಪರಿಕಲ್ಪನೆ ಹಿನ್ನೆಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮದ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬವನ್ನು ಬಿಜೆಪಿಯಿಂದ ವಿಶೇಷವಾಗಿ ಆಚರಿಸಲಾಗುತ್ತಿದೆ.

ಈ ಬಾರಿ ಇನ್ನೂ ಅನೇಕ ಕಾರ್ಯಕ್ರಮಗಳನ್ನು ಬಿಜೆಪಿ ಹಾಕಿಕೊಂಡಿದ್ದು ಪ್ರಧಾನಿ ಮೋದಿ 70 ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆ ಸೆವೆಂಟಿ ಥೀಮ್‍ನಡಿ ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದೆ.

ಈ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಬಿಜೆಪಿ ಸಿದ್ಧತೆ ನಡೆಸಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಬಸವರಾಜ್ ಪಾಟೀಲ್, ಕಾರ್ಯಕರ್ತರಾದ ಪ್ರಸಾದ ಕಂಬಾರ, ಶಿವಶಂಕರ್ ಹಲಗಲಿಮಠ, ಪ್ರವೀಣ ಹೊಂಗಲ್, ಭರತ ಕಾಶನ್ನವರ ಸೇರಿದಂತೆ ಇತರರು ಉಪಸ್ಥಿತರಿದ್ದರು.