ಬೆಂಗಳೂರು:ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಸಿದ್ದವಾಗಿರುವ ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ 30 ವರ್ಷದ ಹಳೆಯ ಪ್ರಕರಣವನ್ನು ಕೆದಕಿ ಹುಬ್ಬಳ್ಳಿಯ ಹಿಂದೂ ಕರಸೇವಕರ ಬಂಧನ ಮಾಡಿರುವುದು ರಾಜಕೀಯವಾಗಿ ತುಂಬಾ ತಂತ್ರಪೂರ್ವಕ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಂಡಿಸಿದ್ದಾರೆ.
ಪ್ರತಿಕ್ರಿಯೆಯಲ್ಲಿ ಬೊಮ್ಮಾಯಿ, "ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗುತ್ತಿರುವಂತ್ತಿರುವುದು ಕಾಂಗ್ರೆಸ್ ನವರಿಗೆ ಸಹಿಸಲು ಆಗುತ್ತಿಲ್ಲ. ಇಡೀ ದೇಶದ ಜನ ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರನ್ನು ಬಂಧಿಸುವುದರ ಹಿಂದಿನ ಉದ್ದೇಶ ಏನು? ಇಡೀ ದೇಶವೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಬೆಂಬಲ ಕೊಡುತ್ತಿರುವ ಸಂದರ್ಭದಲ್ಲಿ ಈ ರೀತಿ ನಡೆಯುತ್ತಿದೆ. ರಾಜ್ಯದಲ್ಲಿ ಕಾನೂನು ಪಾಲನೆ ಮಾಡುವವರೇ ಕಾನೂನು ಉಲ್ಲಂಘನೆ ಮಾಡುತ್ತಿರುವುದಕ್ಕೆ ಇದು ಸ್ಪಷ್ಟ ನಿದರ್ಶನ." ಎಂದಿದ್ದಾರೆ.
ಬೊಮ್ಮಾಯಿ, "ಈಗಾಗಲೇ ರಾಮ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣಕ್ಕೆ ವಿರೋಧ ಮಾಡಿರುವುದಕ್ಕೆ ಕಾಂಗ್ರೆಸ್ ಗೆ ಸಂಸತ್ತಿನಲ್ಲಿ ಪ್ರತಿಪಕ್ಷದ ಸ್ಥಾನವೂ ಇಲ್ಲದಂತಾಗಿದೆ. ಈ ರೀತಿಯ ದ್ವೇಷದ ರಾಜಕಾರಣದಿಂದ ರಾಜ್ಯದಲ್ಲಿಯೂ ಕಾಂಗ್ರೆಸ್ ಅಂತ್ಯ ಕಾಣುವುದೂ ನಿಶ್ಚಿತ." ಎಂದು ಹೇಳಿದ್ದಾರೆ.