ಬೆಂಗಳೂರು:ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋರ್ಟ್ ನಲ್ಲಿ ಇದ್ದರೂ ಮಹಾರಾಷ್ಟ್ರ ಸರ್ಕಾರ ಎರಡೂ ರಾಜ್ಯಗಳ ಗಡಿ ಭಾಗದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ.
ಕರ್ನಾಟಕದ ಗಡಿಯಲ್ಲಿರುವ ಕೆಲವರಿಗೆ ವಿಮೆ ನೀಡುವ ಆದೇಶ ಮಾಡಿರುವುದು ಉದ್ದಟತನದ ಪರಮಾವಧಿಯಾಗಿದ್ದು, ಇದು ಎರಡು ರಾಜ್ಯಗಳ ನಡುವಿನ ಬಾಂಧವ್ಯ ಕದಡುವ ಪ್ರಯತ್ನವಾಗಿದೆ ಎಂದು ಸಿಎಂ ಹೇಳಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಷಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಶಿಂದೆ ಹಾಗೂ ಉಪ ಮುಖ್ಯಮಂತ್ರಿ ಫಡ್ನವೀಸ ಗಡಿ ವಿಚಾರದಲ್ಲಿ ಯಾವುದೇ ರೀತಿಯ ಗೊಂದಲ ಸೃಷ್ಟಿಸುವುದಿಲ್ಲ ಎಂದು ಒಪ್ಪಿಕೊಂಡಿದ್ದರು.
ಈಗ ಕರ್ನಾಟಕದ 865 ಗ್ರಾಮಗಳ ಜನತೆಗೆ ಬಾಬು ಜಗಜೀವನ್ ರಾಮ್ ಆರೋಗ್ಯ ವಿಮೆ ಯೋಜನೆ ಜಾರಿಗೆ ಆದೇಶ ಮಾಡಿರುವುದು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಕೆಲಸವಾಗಿದೆ. ಮಹಾರಾಷ್ಟ್ರ ಸರ್ಕಾರ ತಕ್ಷಣ ತನ್ನ ಆದೇಶವನ್ನು ವಾಪಸ್ ಪಡೆದು,ಅಮಿತ ಷಾ ಅವರ ಸೂಚನೆಗೆ ಗೌವರ ಕೊಡುವ ಮೂಲಕ ಎರಡೂ ರಾಜ್ಯಗಳ ನಡುವಿನ ಬಾಂಧವ್ಯ ಕಾಪಾಡುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಮಹಾರಾಷ್ಟ್ರ ಸರ್ಕಾರ ಇದೇ ರೀತಿ ಉದ್ದಟತನ ಮುಂದುವರೆಸಿದರೆ ಕರ್ನಾಟಕ ಸರ್ಕಾರವೂ ಕೂಡ ಮಹಾರಾಷ್ಟ್ರ ಗಡಿಯಲ್ಲಿರುವ ಕನ್ನಡಿಗರ ರಕ್ಷಣೆಗೆ ಇದೇ ರೀತಿಯ ವಿಮೆ ಜಾರಿಗೊಳಿಸಲಾಗುವುದು.
ಕರ್ನಾಟಕ ಗಡಿಯಲ್ಲಿರುವ ಜನರಿಗೆ ವಿಮೆ ನೀಡುವ ಹೆಸರಿನಲ್ಲಿ ಮಹಾರಾಷ್ಟ್ರ ಸರ್ಕಾರ, ಅವರಿಂದ ಮಹಾರಾಷ್ಟ್ರಕ್ಕೆ ಸೇರಿದವರೆಂದು ಘೋಷಣಾ ಪತ್ರ ತೆಗೆದುಕೊಳ್ಳುವುದು ಖಂಡನೀಯ ಎಂದು ಬೊಮ್ಮಾಯಿ ಹೇಳಿದ್ದಾರೆ.