ಕೊಪ್ಪಳ : ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ನಗರ ಹಾಗೂ ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಚರಂಡಿಗಳ ಶುಚಿತ್ವ ಕಾರ್ಯವನ್ನು ಅಚ್ಚುಕಟ್ಟಾಗಿ ನಡೆಸಲು ಕೂಡಲೇ ಕ್ರಿಯಾಯೋಜನೆ ಸಿದ್ದಪಡಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮೇ 19ರಂದು ಜಿಲ್ಲಾಡಳಿತ ಭವನದಲ್ಲಿನ ಕೇಶ್ವಾನ್ ಹಾಲನಲ್ಲಿ ನಡೆದ ವಿಡಿಯೊ ಸಂವಾದದಲ್ಲಿ ಮಳೆಗಾಲ ಪೂರ್ವ ಮುನ್ನೆಚ್ಚರಿಕೆಯ ಕ್ರಮಗಳ ಬಗ್ಗೆ ಅವರು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಕಾಲುವೆಗಳು ಹಾಗೂ ಚರಂಡಿಗಳು ಕಸ ಕಡ್ಡಿಗಳಿಂದ ತುಂಬಿದಲ್ಲಿ ಅಲ್ಲಿ ಹರಿಯುವ ನೀರಿನ ಪ್ರಮಾಣದಲ್ಲಿ ವ್ಯತ್ಯಾಸವಾಗಿ ಅಕ್ಕಪಕ್ಕದ ಮನೆಗಳಿಗೆ ನೀರು ನುಗ್ಗಿ ಜನತೆಗೆ ತೊಂದರೆ ಆಗುತ್ತದೆ. ಆದ್ದರಿಂದ ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತಾಗಬೇಕು. ಈ ನಿಟ್ಟಿನಲ್ಲಿ ಪ್ರತಿವಾರ ಕಡಿಮೆ ಕೆಲಸ ಇರುವ ದಿನಗಳನ್ನು ಈ ಕೆಲಸಕ್ಕೆ ಮೀಸಲಿಡಬೇಕು. ಎಲ್ಲಾ ನೌಕರ ಸಿಬ್ಬಂದಿಯನ್ನು ಒಟ್ಟುಗೂಡಿಸಿ, ಜೆಸಿಬಿ ಸೇರಿದಂತೆ ಎಲ್ಲ ವಾಹನಗಳನ್ನು ಸೇರಿಸಿ ಶುಚಿತ್ವ ಕಾರ್ಯವನ್ನು ಜಿಲ್ಲೆಯ ಎಲ್ಲಾ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ವಾರ್ಡವಾರು ಯುದ್ಧೋಪಾದಿಯಲ್ಲಿ ನಡೆಸಬೇಕು.
ಇದಕ್ಕೆ ಆಯಾ ವಾರ್ಡಗಳ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ಎಲ್ಲ ಸದಸ್ಯರ ಸಹಕಾರ ಪಡೆಯಬೇಕು ಎಂದು ಜಿಲ್ಲಾಧಿಕಾರಿಗಳು ಸಲಹೆ ಮಾಡಿದರು.
ಈಗಾಗಲೆ ಮಳೆಗಾಲ ಆರಂಭವಾಗಿವೆ. ಚರಂಡಿಯಲ್ಲಿನ ಹೂಳು ತೆಗೆಯದೇ ಇದ್ದಲ್ಲಿ ಅಲ್ಲಿ ನೀರು ಹರಿಯದೇ ಚರಂಡಿಗಳು ತುಂಬಿ ಸೊಳ್ಳೆಗಳು ಹೆಚ್ಚಾಗಿ ಡೆಂಗೆ, ಚಿಕೂನ್‌ಗುನ್ಯದಂತಹ ಕಾಯಿಲೆಗಳು ಹರಡುತ್ತವೆ. ಹೀಗಾಗಿ ವೇಳಾಪಟ್ಟಿ ರಚಿಸಿಕೊಂಡು ಚರಂಡಿಗಳ ಶುಚಿತ್ವ ಕಾರ್ಯವನ್ನು ಕಾಲಮಿತಿಯೊಳಗಡೆ ನಡೆಸಬೇಕು. ಮಳೆಗಾಲದೊಳಗಡೆ ಈ ಕಾರ್ಯವನ್ನು ಪೂರ್ಣಗೊಳಿಸಿದ ಬಗ್ಗೆ ತಪ್ಪದೇ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಆಯಾ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಜಿಲ್ಲೆಯ ಪ್ರತಿಯೊಂದು ಹಳ್ಳಿಗಳಲ್ಲಿ ಸಹ ಗಟಾರುಗಳ ಶುಚಿತ್ವ ಕಾರ್ಯವು ಯುದ್ಧೋಪಾದಿಯಲ್ಲಿ ನಡೆಯುವ ಹಾಗೆ ಎಲ್ಲ ಪಿಡಿಓಗಳ ಮೂಲಕ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಆಯಾ ತಾಲೂಕುಗಳ ಕಾರ್ಯನಿರ್ವಹಣಾಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಬೀಜ, ಗೊಬ್ಬರ ಪೂರೈಕೆಗೆ ಸಲಹೆ :ಪೂರ್ವ ಮುಂಗಾರು ಸಿದ್ಧತಾ ಸಭೆಗಳನ್ನು ತಾಲೂಕುಮಟ್ಟದಲ್ಲಿ ಸಹ ನಡೆಸಬೇಕು. ಕೃಷಿ ಸಹಾಯಕ ನಿರ್ದೇಶಕರು, ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಆಯಾ ತಾಲೂಕುಗಳಿಗೆ ಅಗತ್ಯವಿರುವ ಬಿತ್ತನೆ ಬೀಜ ಮತ್ತು ರಸಗೊಬ್ಬರ ದಾಸ್ತಾನಿಗೆ ವ್ಯವಸ್ಥೆ ಮಾಡಿಕೊಳ್ಳಬೇಕು. ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ಸೇರಿದಂತೆ ಎಲ್ಲಾ ಅಧಿಕಾರಿಗಳು ಈ ಸಂದರ್ಭದಲ್ಲಿ ರೈತರೊಂದಿಗೆ ತಾಳ್ಮೆಯಿಂದ ವರ್ತಿಸಬೇಕು ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಕಾಮಗಾರಿಗಳನ್ನು ಆರಂಭಿಸಿ:ವಿಧಾನಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆಯು ತೆರವಾಗಿದ್ದು, ಟೆಂಡರ್ ಪ್ರಕ್ರಿಯೆಗಳನ್ನು ಮತ್ತು ಕಾಮಗಾರಿ ಕೆಲಸಗಳನ್ನು ಕೂಡಲೇ ಆರಂಭಿಸಬೇಕು. ಮಳೆಗಾಲದೊಳಗಡೆ ಮುಗಿಯಬೇಕಾದ ಕಾಮಗಾರಿಗಳನ್ನು ಪೂರ್ಣಗೊಳಿಸಲು ವಿಳಂಬಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಇದೆ ವೇಳೆ ಜಿಲ್ಲಾಧಿಕಾರಿಗಳು ತಹಸೀಲ್ದಾರರು, ತಾಪಂ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಂಬಂಧಿಸಿದ ಇನ್ನೀತರ ಇಲಾಖೆಗಳ ಎಲ್ಲ ತಾಲೂಕುಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆ, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ ಕಡಿ, ಸಹಾಯಕ ಆಯುಕ್ತರಾದ ಬಸವಣ್ಣೆಪ್ಪ ಕಲಶೆಟ್ಟಿ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ಕಾವ್ಯರಾಣಿ ಕೆ.ವಿ., ಆಯಾ ತಾಲೂಕುಗಳ ತಹಸೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಮತ್ತು ಇನ್ನೀತರ ಅಧಿಕಾರಿಗಳು ಉಪಸ್ಥಿತರಿದ್ದರು.