ಬೆಳಗಾವಿ : ಬೆಂಗಳೂರಿನಲ್ಲಿ ನಡೆಯುವ ವಿಧಾನ ಮಂಡಲ ಅಧಿವೇಶನ ಸಂದರ್ಭದಲ್ಲಿ ಸಹ ನಾವು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚಿಸಿ ಸಮಸ್ಯೆಗಳನ್ನು ಪರಿಹರಿಸಬಹುದಾಗಿದೆ ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ. ಪಾಟೀಲ ಅವರು ಹೇಳಿದರು.
ವಿಧಾನ ಪರಿಷತ್‌ನಲ್ಲಿ ಡಿಸೆಂಬರ್ 15ರಂದು ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಯ ವಿಷಯಗಳ ಮೇಲೆ ನಡೆದ ಚರ್ಚೆಯ ವೇಳೆ ಅವರು ಮಾತನಾಡಿ, ಪ್ರತಿ ವರ್ಷ ಬೆಳಗಾವಿಯಲ್ಲಿ ನಡೆಯುವ ಅಧಿವೇಶನ ವೇಳೆಯಲ್ಲಿಯೇ ಉತ್ತರ ಕರ್ನಾಟಕ ಅಭಿವೃದ್ಧಿಯ ವಿಷಯ ಚರ್ಚೆಯಾಗಬೇಕು ಎನ್ನುವ ಮಾನಸಿಕ ಸ್ಥಿತಿಯಿಂದ ನಾವು ಹೊರ ಬರಬೇಕು. ಅಂತಹ ಮಾನಸಿಕ ತೊಡಕುಗಳು ದೂರಾಗಬೇಕು. ಜನರಿಗೆ ತಪ್ಪು ಸಂದೇಶ ಹೋಗಬಾರದು. ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ ಮೈಸೂರು, ಮಂಡ್ಯ ಸೇರಿದಂತೆ ದಕ್ಷಿಣ ಕರ್ನಾಟಕ ಭಾಗದ ಜಿಲ್ಲೆಗಳ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಯಾಗಿ ಪರಿಹಾರ ಸಿಕ್ಕಿದೆ. ಅದರಂತೆ ನಾವು ಬೆಂಗಳೂರಿನಲ್ಲಿ ನಡೆಯುವ ಅಧಿವೇಶನದ ವೇಳೆ ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಬಗ್ಗೆ ಸಮಗ್ರ ಚರ್ಚಿಸಿ ಪರಿಹಾರೋಪಾಯ ಕಂಡುಕೊಳ್ಳಬಹುದಾಗಿದೆ ಎಂದು ಸಲಹೆ ಮಾಡಿದರು.