ಗಣರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಿದ್ಧತೆ ಸಭೆ ನಡೆಸಿದ ಜಿಲ್ಲಾಧಿಕಾರಿ

  • 15 Jan 2024 , 6:39 AM
  • Belagavi
  • 271

ಬೆಳಗಾವಿ : ಸರ್ಕಾರದ ಮಾರ್ಗಸೂಚಿ ಅನ್ವಯ ಜನವರಿ 26 ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಜ.11) ನಡೆದ ಗಣರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜನವರಿ 26 ರಂದು ಕಡ್ಡಾಯವಾಗಿ ಎಲ್ಲಾ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಧ್ವಜಾರೋಹಣ ಸಮಯದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಜರಿರಬೇಕು.
ಪೊಲೀಸ್ ಇಲಾಖೆ, ಅಗ್ನಿಶಾಮಕ, ಕೆ.ಎಸ್.ಆರ್. ಪಿ, ಎನ್.ಸಿ.ಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ಪರೇಡ್ ನಲ್ಲಿ ಭಾಗವಹಿಸುವವರು ಪೂರ್ವ ತಯಾರಿ ಮಾಡಿಕೊಳ್ಳಬೇಕು.

ಕೋವಿಡ್ ಮಾರ್ಗಸೂಚಿ ಅನ್ವಯ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲರೂ ಮಾಸ್ಕ್ ಧರಿಸಬೇಕು. ಗಣರಾಜ್ಯೋತ್ಸವ
ಪರೇಡ್ ನಲ್ಲಿ ಭಾಗವಹಿಸಿದ ಇಲಾಖೆ ಸಿಬ್ಬಂದಿ, ಶಾಲಾ ಮಕ್ಕಳಿಗೆ ಪ್ರಮಾಣಪತ್ರ ವಿತರಣೆ ಮಾಡಿ ಗೌರವ ಸೂಚಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ನಗರದ ಪ್ರಮುಖ ವೃತ್ತಗಳಿಗೆ ದೀಪಾಲಂಕಾರ:

ವೇದಿಕೆಯ ಸಿದ್ಧತೆ, ಆಸನ, ಧ್ವನಿವರ್ಧಕ, ಕುಡಿಯುವ ನೀರು ಮತ್ತಿತರ ಮೂಲಸೌಕರ್ಯವನ್ನು ಒದಗಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ವ್ಯವಸ್ಥೆ ಮಾಡಿಕೊಳ್ಳಬೇಕು. ನಗರದ ಪ್ರಮುಖ ವೃತ್ತಗಳನ್ನು ಸ್ವಚ್ಛಗೊಳಿಸಿ ದೀಪಾಲಂಕಾರ ಮಾಡಬೇಕು ಎಂದು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಸೂಚಿಸಿದರು.

ಎಲ್ಲ ದೇವಾಲಯಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲು ಕ್ರಮ‌ಕೈಗೊಳ್ಳುವಂತೆ ಮುಜರಾಯಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸರ್ಕಾರಿ ಕಚೇರಿಗಳಿಗೂ ಕೂಡ ದೀಪಾಲಂಕಾರ ಮಾಡಬೇಕು. ಅದೇ ರೀತಿ ‌ಸಾರ್ವಜನಿಕರು ಕೂಡ ತಮ್ಮ ಮನೆ, ಅಂಗಡಿ-ಮುಂಗಟ್ಟುಗಳನ್ನು‌ ಕೂಡ ಅಲಂಕಾರ ಮಾಡಬೇಕು.

ಗಣರಾಜ್ಯೋತ್ಸವ ದಿನ ಆಸಕ್ತ ಸಂಘ-ಸಂಸ್ಥೆಗಳು ಆಸ್ಪತೆಯ ರೋಗಿಗಳಿಗೆ, ವೃದ್ಧಾಶ್ರಮ, ಅನಾಥಾಶ್ರಮ, ಅಂಧ ಮಕ್ಕಳ ಶಾಲೆಗಳಿಗೆ ಹಣ್ಣುಗಳನ್ನು ಹಂಚಬಹುದು ಎಂದು ತಿಳಿಸಿದರು.

ಧ್ವಜಸಂಹಿತೆ ಪಾಲನೆಗೆ ಸೂಚನೆ:

ಸರ್ಕಾರಿ ಕಚೇರಿಗಳಲ್ಲಿ ಧ್ವಜ ಕಟ್ಟುವುದಕ್ಕೆ ಸಂಬಂಧಿಸಿದಂತೆ ಧ್ವಜಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಹಾಗೂ ಎಲ್ಲ ಇಲಾಖೆಯ ಅಧಿಕಾರಿಗಳು ಈ ಕುರಿತು ವಿಶೇಷ ಕಾಳಜಿ ವಹಿಸಬೇಕು ಎಂದು‌ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ದರ್ಶನ್ ಹೆಚ್.ವಿ, ಮಹಾನಗರ ಪಾಲಿಕೆಯ ಆಯುಕ್ತರಾದ ರುದ್ರೇಶ್ ಘಾಳಿ, ಡಿ ಹೆಚ್.ಓ ಮಹೇಶ ಕೋಣಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Read All News