ಲಕ್ಷಾಂತರ ಜನರೊದಿಗೆ ಹೆಜ್ಜೆ ಹಾಕಿದ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ, ಮೃಣಾಲ ಹೆಬ್ಬಾಳಕರ್
- 15 Jan 2024 , 1:26 AM
- Belagavi
- 217
ಬೆಂಗಳೂರು : ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಬೆಂಗಳೂರಿನಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಆಯೋಜಿಸಿರುವ ಐತಿಹಾಸಿಕ 'ಸ್ವಾತಂತ್ರ್ಯ ನಡಿಗೆ'ಯಲ್ಲಿ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಲಕ್ಷಾಂತರ ಜನರೊಂದಿಗೆ ಹೆಜ್ಜೆ ಹಾಕಿದರು.

ಬೆಳಗಾವಿ ಜಿಲ್ಲೆಯಿಂದ ಸಹಸ್ರಾರು ಜನರೊಂದಿಗೆ ಬೆಂಗಳೂರಿಗೆ ತೆರಳಿರುವ ಹೆಬ್ಬಾಳಕರ್, ಈ ಐತಿಹಾಸಿಕ ಪಾದಯಾತ್ರೆಯಲ್ಲಿ ಸಕ್ರೀಯವಾಗಿ ಪಾಲ್ಗೊಂಡರು. ``ಬೆಳಗಾವಿ ಜಿಲ್ಲೆಯ ಎಲ್ಲ 18 ವಿಧಾನ ಸಭಾ ಕ್ಷೇತ್ರದಿಂದ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಜನರು ಆಗಮಿಸಿದ್ದಾರೆ. ಅವರೆಲ್ಲ ಅತ್ಯಂತ ಉತ್ಸಾಹದಿಂದ ಈ ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿರುವ ಈ ಸಂದರ್ಭದಲ್ಲಿ ಇಂತಹ ಅಪರೂಪದ ಕಾರ್ಯಕ್ರಮ ನಡೆಯುತ್ತಿರುವುದು ಮತ್ತು ಇದರಲ್ಲಿ ಪಾಲ್ಗೊಳ್ಳುವ ಅವಕಾಶ ಸಿಕ್ಕಿರುವುದು ನಮ್ಮ ಪಾಲಿಗೆ ಭಾಗ್ಯವೇ ಸರಿ'' ಎಂದು ಲಕ್ಷ್ಮೀ ಹೆಬ್ಬಾಳಕರ್ ಈ ಸಂದರ್ಭದಲ್ಲಿ ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವ 75 ಕಿಮೀ ಪಾದಯಾತ್ರೆಯಲ್ಲಿ 2 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ.










