Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಗ್ರಾಮೀಣ ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ಆದ್ಯತೆ : ಸಚಿವ ಬೊಮ್ಮಾಯಿ

localview news

ಉಡುಪಿ: ಹೊರಜಿಲ್ಲೆ ಹಾಗೂ ಗ್ರಾಮೀಣ ಪ್ರದೇಶದಿಂದ ತಾಲೂಕು ಕೇಂದ್ರಗಳಿಗೆ ವಿದ್ಯಾಭ್ಯಾಸಕ್ಕಾಗಿ ವಲಸೆ ಬರುವಂತಹ ಹೆಣ್ಣು ಮಕ್ಕಳಿಗೆ ತಂಗಲು ಅನುಕೂಲವಾಗುವಂತೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನೂತನವಾದ ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ನಿರ್ಮಿಸಲಾಗಿದ್ದು, ಈ ಮೂಲಕ ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಕಾರ್ಕಳದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ನಿರ್ಮಿತಿ ಕೇಂದ್ರ ಉಡುಪಿ ಇವರ ಆಶ್ರಯದಲ್ಲಿ 1.99 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಇದರ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಅತ್ಯಂತ ಶಿಸ್ತು, ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ವಿದ್ಯಾರ್ಜನೆ ಗೈದು ತಮ್ಮ ಭವಿಷ್ಯವನ್ನು ರೂಪಿಸಿ, ಅದರ ಮುಖೇನ ನಾಡಿನ ಭವಿಷ್ಯವನ್ನು ರೂಪಿಸಿಕೊಳ್ಳಲು ಮಾದರಿಯಾಗಬೇಕು.

ಸಮಾಜ ನಿರ್ಮಾಣದ ಕೇಂದ್ರ ಬಿಂದುವಾದ ಹೆಣ್ಣು ಮಕ್ಕಳಿಗೆ ಸರ್ಕಾರವು ಆಧುನಿಕ ಶಿಕ್ಷಣವನ್ನು ನೀಡಿದ್ದಲ್ಲಿ ಸುಸಜ್ಜಿತ ಹಾಗೂ ಅಕ್ಷರ ಭರಿತ ಜನಾಂಗ ನಿರ್ಮಾಣ ಮಾಡುವಲ್ಲಿ ಯಶ ಸಾಧಿಸಬಹುದು ಎಂದರು. ರಾಜ್ಯ ಸರ್ಕಾರದ ಸಚೇತಕ ಸುನೀಲ್ ಕುಮಾರ್ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಾಣಗೊಂಡ ಈ ವಸತಿ ಶಾಲೆ ಇನ್ನಷ್ಟು ವಿದ್ಯಾರ್ಥಿಗಳನ್ನು ಆಕರ್ಷಿಸುವಂತಾಗಲಿ.

ಇಲ್ಲಿ ಕಲಿಯುವಂತಹ ವಿದ್ಯಾರ್ಥಿಗಳು ಒಳ್ಳೆಯ ವಿದ್ಯಾಭ್ಯಾಸ ಪಡೆದು ಸಮಾಜದ ಮುಖ್ಯ ವಾಹಿನಿಗೆ ಬರುವಂತಹ ಒಳ್ಳೆಯ ವಾತಾವರಣ ನಿರ್ಮಾಣವಾಗಲೀ ಎಂಬ ಆಶಯವನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ, ಕಾರ್ಕಳ ಪುರಸಭೆ ಅಧ್ಯಕ್ಷೆ ಸುಮಾ, ಜಿಲ್ಲಾಧಿಕಾರಿ ಜಿ. ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ವೈ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು, ಮತ್ತಿತರರು ಉಪಸ್ಥಿತರಿದ್ದರು.