Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ನಾಡ ಹಬ್ಬ ಕನ್ನಡ ರಾಜ್ಯೋತ್ಸವ ಆಚರಣೆಯ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

localview news

ಬೆಂಗಳೂರು:01.11.2021ರಂದು ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಿದ್ದು, ರಾಜ್ಯದ ಜನತೆಯ ಹಿತದೃಷ್ಟಿಯಿಂದ ಮತ್ತು ಕೋವಿಡ್-19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಸರಳ ಹಾಗೂ ಗೌರವಪೂರ್ವಕವಾಗಿ ಆಚರಿಸಲು ನಿರ್ಧರಿಸಿದ್ದು, ಅದರನ್ವಯ ವಿಪತ್ತು ನಿರ್ವಹಣಾ ಅಧಿನಿಯಮ, 2005ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ರಾಜ್ಯ ಕಾರ್ಯಕಾರಿ ಸಮಿತಿಯ ಅಧ್ಯಕ್ಷನಾಗಿ ಈ ಕೆಳಗೆ ಸಹಿ ಮಾಡಿರುವ ನಾನು ಕನ್ನಡ ರಾಜ್ಯೋತ್ಸವ ಆಚರಣೆಗೆ ಈ ಆದೇಶದ ಅನುಬಂಧಲ್ಲಿರುವಂತೆ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಿದೆ.

1. ಕೋವಿಡ್-19 ವೈರಾಣು ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ಸಲುವಾಗಿ, ನಾಡಹಬ್ಬ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಮತ್ತುಗೌರವ ಪೂರ್ವಕವಾಗಿ ಆಚರಿಸುವುದು.
2. ಕನ್ನಡ ರಾಜ್ಯೋತ್ಸವ ಸಮಾರಂಭದ ಆಚರಣೆಯ ವೇಳೆ ರಾಜ್ಯಾದ್ಯಂತ ಧ್ವಜಾರೋಹಣ ಸ್ಥಳದಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಬಳಕೆ ಮತ್ತು ಸ್ಯಾನಿಟೈಸರ್ ಗಳನ್ನು ಕಡ್ಡಾಯವಾಗಿ ಬಳಸುವ ಷರತ್ತಿಗೆ ಒಳಪಟ್ಟು ಗರಿಷ್ಠ 500 ಜನರು ಸೇರಲು ಮಾತ್ರ ಅನುಮತಿಸಿದೆ.
3. ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ಸಾಮಾಜಿಕ ಅಂತರವಿಲ್ಲದೆ ನಡೆಸಲಾಗುವ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ.
4. ರಾಜ್ಯೋತ್ಸವ ಆಚರಣೆಯು ಸಮಾಜದಲ್ಲಿ ಶಾಂತಿ ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರಕವಾಗಿರುವುದರಿಂದ ಗೌರವಪೂರ್ವಕವಾಗಿ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಕಾಪಾಡುವುದು.
5. ರಾಜ್ಯದಲ್ಲಿನ ಸಂಘ-ಸಂಸ್ಥೆಗಳು ರಾಜ್ಯೋತ್ಸವ ಆಚರಣೆಗೆ ಪೊಲೀಸ್ | ಮಹಾನಗರ ಪಾಲಿಕೆ / ಸ್ಥಳೀಯ ಸಂಸ್ಥೆ / ವಿದ್ಯುತ್ ಇಲಾಖೆ / ಆರೋಗ್ಯ ಇಲಾಖೆ / ಅಗ್ನಿಶಾಮಕ ಇಲಾಖೆ / ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಇತರ ಸಂಬಂಧಪಟ್ಟ ಇಲಾಖೆಗಳಿಂದ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆಯತಕ್ಕದ್ದು.
6. ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗುವ ಸಾಂಸ್ಕೃತಿಕ ಮನರಂಜನಾ ಹಾಗೂ ಇನ್ನಿತರ ಕಾರ್ಯಕ್ರಮಗಳಲ್ಲಿ ಕನಿಷ್ಠ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು.
7. ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಸಣ್ಣ ಮಕ್ಕಳು, ಹಿರಿಯ ನಾಗರಿಕರು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವವರು ರಾಜ್ಯೋತ್ಸವದಲ್ಲಿ ಭಾಗವಹಿಸದಂತೆ ಎಚ್ಚರವಹಿಸುವುದು.
8. ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು, ಅಲ್ಲದೇ, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಸ್ಥಳೀಯ ಸಂಸ್ಥೆ/ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ / ನಿರ್ದೇಶನ ಹಾಗೂ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.
9. ರಾಷ್ಟ್ರೀಯ ನಿರ್ದೇಶನಗಳನ್ನು ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ/ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು.