ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಯ ಕನಸು ಸಾಕಾರಗೊಳ್ಳುತ್ತಿದೆ: ಚನ್ನರಾಜ ಹಟ್ಟಿಹೊಳಿ
ಬೆಳಗಾವಿ : ಗ್ರಾಮೀಣ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದ್ದು ಗ್ರಾಮೀಣ ಜನರಿಗೆ ಅತ್ಯಗತ್ಯವಾದ ರಸ್ತೆ, ನೀರು ಮೊದಲಾದ ಸೌಕರ್ಯಗಳನ್ನು ಒದಗಿಸಲು ನಿರಂತರ ಶ್ರಮ ವಹಿಸಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಲಗಾ ಗ್ರಾಮದ ಒಳಾಂಗಣ ರಸ್ತೆಗಳ ಅಭಿವೃದ್ಧಿ ಹಾಗೂ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಶನಿವಾರ ಚಾಲನೆ ನೀಡಿ ಮಾತನಾಡಿದ ಅವರು, ಸಹೋದರಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಮುತುವರ್ಜಿ ವಹಿಸಿ ಪಂಚಾಯತ ರಾಜ ಇಂಜಿನಿಯರಿಂಗ್ ಇಲಾಖೆ ವತಿಯಿಂದ 13 ಲಕ್ಷ ರೂ,ಗಳ ಅನುದಾನವನ್ನು ರಸ್ತೆ ಅಭಿವೃದ್ಧಿಗೆ ಮಂಜೂರು ಮಾಡಿಸಿದ್ದಾರೆ.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಯಾಗಬೇಕೆಂಬ ನಮ್ಮೆಲ್ಲರ ಕನಸು ಒಂದೊಂದೊಂದಾಗಿ ಸಾಕಾರಗೊಳ್ಳುತ್ತಿದೆ. ಮುಂದಿನ ದಿನಗಳಲ್ಲಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಗೆ ಮತ್ತಷ್ಟು ಕೆಲಸಗಳನ್ನು ಮಾಡಲಾಗುವುದು ಎಂದು ಭರವಸೆ ನೀಡಿದರು.