Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

6 ರಿಂದ 12 ವರ್ಷದ ಮಕ್ಕಳಿಗೆ ಲಸಿಕೆ ಕಡ್ಡಾಯ: ಸಚಿವ ಗೋವಿಂದ ಕಾರಜೋಳ

localview news

ಬೆಳಗಾವಿ: ಜಿಲ್ಲೆಯ ಗ್ರಾಮದ ಪ್ರತಿ ಮನೆಗಳಿಗೆ ಶುದ್ಧ ಕುಡಿಯುವ ನೀರಿನ ಸಂಪರ್ಕ ಒದಗಿಸಬೇಕು. ಕೋವಿಡ್-19 4ನೇ ಅಲೆಯ ನಿರ್ವಹಣೆಗೆ ಬೆಡ್, ಆಕ್ಸಿಜನ್, ವೆಂಟಿಲೇಟರ್ ಗಳ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಹಾಗೂ ಸರ್ಕಾರದ ನಿರ್ದೇಶನದಂತೆ 6 ರಿಂದ 12 ವರ್ಷದ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಹಾಗೂ ಕೋವಿಡ್-19 ಪರಿಸ್ಥಿತಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಲ ಜೀವನ ಮಿಷನ್ ಯೋಜನೆಯಡಿ ಜಿಲ್ಲೆಯ ಎಲ್ಲಾ ಗ್ರಾಮದ ಪ್ರತಿ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಬೇಕು. ಕೋವಿಡ್-19 ನಾಲ್ಕನೇ ಅಲೆಯ ಪರಿಸ್ಥಿತಿ ನಿರ್ವಹಣೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಬೆಡ್, ಆಕ್ಸಿಜನ್, ವೆಂಟಿಲೇಟರ್ ಹಾಗೂ ಅವಶ್ಯಕ ವೈದ್ಯಕೀಯ ಚಿಕಿತ್ಸೆ ಒದಗಿಸಲು ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಜೂನ್ ತಿಂಗಳಿಂದ ಅಕ್ಟೋಬರ್ ವರೆಗೆ ಕೋವಿಡ್-19 ನಾಲ್ಕನೇ ಅಲೆ ಪ್ರಾರಂಭ ಆಗುವ ಸಾದ್ಯತೆ ಇದೆ ಇದರಿಂದ ಮಕ್ಕಳ ಮೇಲೆ ಪ್ರಭಾವ ಬೀರಬಹುದು ಹಾಗಾಗಿ ಮುನ್ನೆಚ್ಚರಿಕೆ ವಹಿಸಿ ಬೆಡ್, ಐಸೋಲೇಶನ್, ಆಕ್ಸಿಜನ್ ಪೂರೈಕೆಗೆ ಯಾವುದೇ ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಸಮರ್ಪಕ ಆಕ್ಸಿಜನ್ ಪೂರೈಕೆಗೆ ಸಿದ್ಧತೆ:

ಜಿಲ್ಲೆಯಲ್ಲಿ ಒಟ್ಟು 7 ಆಕ್ಸಿಜನ್ ಉತ್ಪಾದನಾ ಘಟಕ ಹಾಗೂ ಪ್ರತಿ ತಾಲೂಕು ಆಸ್ಪತ್ರೆಗಳಲ್ಲಿ 6 ವೆಂಟಿಲೇಟರ್ ಗಳಿವೆ ಅವುಗಳ ನಿರ್ವಹಣೆಗಾಗಿ ಸಿಬ್ಬಂದಿಗಳ ಕೊರತೆಯಾಗದಂತೆ ನುರಿತ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಕಳೆದ ಕೋವಿಡ್ ಅಲೆಗಳಲ್ಲಿ ಕಾರ್ಯ ನಿರ್ವಹಿಸಿದ ಸಿಬ್ಬಂದಿಗಳನ್ನೆ ಮತ್ತೆ ನೇಮಕ ಮಾಡಿಕೊಳ್ಳಬೇಕು.

ಚಿಕ್ಕೋಡಿ, ಬೆಳಗಾವಿ ಹಾಗೂ ಗೋಕಾಕ್ ಸೇರಿದಂತೆ ಸ್ಥಳೀಯ ಲ್ಯಾಬ್ ಗಳಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಬೇಕು. ಆಂಬುಲೆನ್ಸ್ ಗಳನ್ನು ತಕ್ಷಣ ದುರಸ್ತಿ ಮಾಡಬೇಕು ಹಾಗೂ ಪ್ರಾಥಮಿಕ ಸುರಕ್ಷಿತ ಅಧಿಕಾರಿಗಳು ಅವಶ್ಯವಿದ್ದು, ರಾಜ್ಯ ಸರ್ಕಾರ ಈಗಾಗಲೇ ನೀಡಿದ ನಿರ್ದೇಶನದಂತೆ ನೇಮಕ ಮಾಡಿಕೊಳ್ಳಬೇಕು ಎಂದು ಹೇಳಿದರು.

ತೋಟಪಟ್ಟಿ ಮನೆಗಳಿಗೆ ನೀರಿನ ಸಂಪರ್ಕ:

ಪ್ರತಿ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಒದಗಿಸುವಂತೆ ಗ್ರಾಮದ ಸಮೀಪ ಇರುವ ತೋಟ ಪಟ್ಟಿ ಮನೆಗಳಿಗೂ ಕುಡಿಯುವ ನೀರು ಪೂರೈಕೆ ಆಗುವಂತೆ ಗ್ರಾಮ ಪಂಚಾಯತಿಯಿಂದ ಸಮೀಕ್ಷೆ ನಡೆಸಿ ನೀರಿನ ಸಂಪರ್ಕ ಒದಗಿಸಬೇಕು ಎಂದು ಹೇಳಿದರು.

ಈಗಾಗಲೇ ಜಲ ಜೀವನ ಮಿಷನ್ ಯೋಜನೆಯಡಿ ರಾಮದುರ್ಗ, ಕಿತ್ತೂರು, ಬೈಲಹೊಂಗಲ, ಸವದತ್ತಿ ತಾಲೂಕಿನ ಗ್ರಾಮಗಳ ಪ್ರತಿ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ನೀಡಲಾಗಿದೆ. ಜಿಲ್ಲೆಯಲ್ಲಿ ಉಳಿದ 81 ಗ್ರಾಮಗಳ ಮನೆಗಳಿಗೆ ಕುಡಿಯುವ ನೀರು ಪೂರೈಸುವುದು ಬಾಕಿ ಇದ್ದು, ಶೀಘ್ರದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ತಿಳಿಸಿದರು.

ಅದೇ ರೀತಿ ತೋಟ ಪಟ್ಟಿ ಮನೆಗಳು ಸೇರಿದಂತೆ ಜಿಲ್ಲೆಯಲ್ಲಿ ಗ್ರಾಮದ ಪ್ರತಿ ಮನೆಗಳಿಗೂ ಶುದ್ಧ ಕುಡಿಯುವ ನೀರಿನ ಸಂಪರ್ಕ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾಗವಾಡ, ಚಿಕ್ಕೋಡಿ ತಾಲೂಕಿನ ಗ್ರಾಮಗಳ ಪೈಪ್ ಲೈನ್ ದುರಸ್ತಿ:

ಜಿಲ್ಲೆಯಲ್ಲಿ ಚಿಕ್ಕೋಡಿ ಹಾಗೂ ಕಾಗವಾಡ ತಾಲೂಕಿನ ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಪೈಪ್ ಲೈನ್ ಗಳ ದುರಸ್ತಿ ಮಾಡಬೇಕು. ಯಾವುದೇ ಗ್ರಾಮಗಳಿಗೂ ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ನಿಪ್ಪಣಿಯಲ್ಲಿ ಅನೇಕ ಬಡಾವಣೆ ಅಭಿವೃದ್ಧಿ ಪಡಿಲಾಗಿದೆ. ಅದರಲ್ಲಿ ನೀರು, ರಸ್ತೆ, ಹಾಗೂ ಮೂಲಭೂತ ಸೌಲಭ್ಯ ಇಲ್ಲದ ನಿವೇಶನಗಳ ಮಾರಾಟಕ್ಕೆ ಪರವಾನಿಗೆ ನೀಡಬಾರದು ಎಂದು ತಿಳಿಸಿದರು ಎಂದು ಸಚಿವರಾದ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಎಂ. ಜಿ ಹಿರೇಮಠ ಅವರು ಬಾಕಿ ಇರುವ ಕಾಮಗಾರಿಗಳನ್ನು ಕೂಡಲೇ ಕೈಗೆತ್ತಿಕೊಂಡು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳನ್ನು ಕೋವಿಡ್ ನಿರ್ವಹಣೆ ಸಂಧರ್ಬದಲ್ಲಿ ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಅವರು ತಿಳಿಸಿದರು.

ರೈತರಿಗೆ ಬೀಜ, ಗೊಬ್ಬರಗಳ ಸಮರ್ಪಕ ಪೂರೈಕೆ:

ಕೃಷಿ ಇಲಾಖೆಯಿಂದ ರೈತರಿಗೆ ಅವಶ್ಯವಿರುವ ಗೊಬ್ಬರ, ಡಿಎಪಿ, ಕೀಟ ನಾಶಕ ಔಷಧಿ ಸೇರಿದಂತೆ ಯಾವುದೇ ಬೀಜ ರಸಗೊಬ್ಬರಗಳ ಕೊರತೆ ಆಗದಂತೆ ನೋಡಿಕೊಳ್ಳಬೇಕು. ಮುಂಗಾರು ಬಿತ್ತನೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಎಲ್ಲ ರೀತಿಯ ದಾಸ್ತಾನು ಶೇಖರಣೆ ಮಾಡಬೇಕು ಎಂದು ಸಚಿವ ಗೋವಿಂದ ಕಾರಜೋಳ ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳಾದ ದರ್ಶನ್. ಹೆಚ್ ವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಡಿಸಿಪಿ ರವೀಂದ್ರ ಗಡಾದಿ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಶಶಿಕಾಂತ ಮುಣ್ಯಾಳ ಹಾಗೂ ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.