Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಅಕ್ರಮ ತಡೆಗೆ ಬಿಗಿಕ್ರಮ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

localview news

ಬೆಳಗಾವಿ: ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ವೇಳೆ ಯಾವುದೇ ರೀತಿಯ ಅಕ್ರಮವನ್ನು ತಡೆಗಟ್ಟುವ ಉದ್ದೇಶದಿಂದ ಪರೀಕ್ಷಾರ್ಥಿಗಳ ತಪಾಸಣೆಗಾಗಿ ಎರಡೂ ಹಂತದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಪ್ರತಿ ಪರೀಕ್ಷಾ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಮೇ 21 ಹಾಗೂ 22 ರಂದು ನಡೆಯಲಿರುವ ಶಿಕ್ಷಕರ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಜಿಲ್ಲೆಯ ಅಧಿಕಾರಿ/ಸಿಬ್ಬಂದಿಗಾಗಿ ಚಿಕ್ಕೋಡಿಯ ಖಾಸಗಿ ಪಾಲಿಟೆಕ್ನಿಕ್ ಸಭಾಂಗಣದಲ್ಲಿ ಮಂಗಳವಾರ(ಮೇ 17 ) ನಡೆದ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರೀಕ್ಷಾ ಕೇಂದ್ರಗಳನ್ನು ಪ್ರವೇಶಿಸುವ ಮುನ್ನ ಪರೀಕ್ಷಾರ್ಥಿಗಳ ತಪಾಸಣೆಗಾಗಿ ಪೊಲೀಸ್, ಕಂದಾಯ ಮತ್ತಿತರ ಇಲಾಖೆಗಳ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಯಾವುದೇ ರೀತಿಯ ಅಕ್ರಮಕ್ಕೆ ಅವಕಾಶ ನೀಡಬಾರದು. ಅಕ್ರಮ ತಡೆಗಟ್ಟಲು ಪ್ರತಿಯೊಂದು ಪರೀಕ್ಷಾ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಕೂಡ ಅಳವಡಿಸಲಾಗುತ್ತಿದೆ.

ಪಾರದರ್ಶಕತೆ ನಮ್ಮೆಲ್ಲರ ಜವಾಬ್ದಾರಿ:

ಪಾರದರ್ಶಕ ಪರೀಕ್ಷೆ ನಮ್ಮೆಲ್ಲರ ಜವಾಬ್ದಾರಿ. ಇತ್ತೀಚೆಗೆ ಕೆಲ ನೇಮಕಾತಿ ಪರೀಕ್ಷೆಗಳಲ್ಲಿ ನ್ಯೂನ್ಯತೆ ಕಂಡುಬಂದಿರುವುದರಿಂದ ಈ ಬಾರಿ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಬೇಕಿದೆ.

ಈ ಪರೀಕ್ಷೆ ಬಳಿಕ ಜಿಲ್ಲೆಯಲ್ಲಿ ಶಿಕ್ಷಕರ ಕೊರತೆ ನೀಗಲಿದೆ. ಒಬ್ಬ ಅತ್ಯುತ್ತಮ ಶಿಕ್ಷಕನನ್ನು ಆಯ್ಕೆ ಮಾಡುವುದರಿಂದ ಮುಂದಿನ ಮೂವತ್ತು ವರ್ಷಗಳ ಕಾಲ ಮಕ್ಕಳ ಭವಿಷ್ಯಕ್ಜೆ ಭದ್ರ ಬುನಾದಿಯಾಗಲಿದೆ ಎಂದು ಜಿಲ್ಲಾಧಿಕಾರಿ ಪಾಟೀಲ ತಿಳಿಸಿದರು.

ಜಿಲ್ಲೆಯಲ್ಲಿ ಯಾವುದೇ ರೀತಿಯ ನ್ಯೂನ್ಯತೆ ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳು ಉತ್ತರಿಸಬೇಕಾಗುತ್ತದೆ. ಆದ್ದರಿಂದ ಎಲ್ಲರೂ ಸೇರಿಕೊಂಡು ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕಿದೆ.

ಜಿಲ್ಲೆಯಲ್ಲಿ ಅತೀ ಹೆಚ್ಚು ಪರೀಕ್ಷಾ ಕೇಂದ್ರಗಳು:

ಬೆಳಗಾವಿಯಲ್ಲಿ ಅತೀ ಹೆಚ್ಚಿನ ಪರೀಕ್ಷಾ ಕೇಂದ್ರಗಳಿರುವುದರಿಂದ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು. ಪರೀಕ್ಷೆ ಕೆಲಸವನ್ನು ಗಂಭೀರವಾಗಿ ಪರಿಗಣಿಸಬೇಕು. ಪರೀಕ್ಷೆಗೆ ನಿಯೋಜಿತರಾದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ನಿರ್ದೇಶನ ನೀಡಿದರು.

ಇದೇ ಮೊದಲ ಬಾರಿ ಪರೀಕ್ಷಾ ಕೇಂದ್ರಗಳನ್ನು ಸುಪರ್ದಿಗೆ ಪಡೆದುಕೊಳ್ಳಲಾಗುತ್ತಿದೆ. ಪರೀಕ್ಷಾರ್ಥಿಗಳನ್ನು ಹೊರತುಪಡಿಸಿ ಮೂರನೇ ವ್ಯಕ್ತಿಗೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಪರೀಕ್ಷಾ ಕೇಂದ್ರ ಪ್ರವೇಶಿಸುವ ಮುನ್ನ ಎರಡು ಹಂತಗಳಲ್ಲಿ ಅಭ್ಯರ್ಥಿಗಳ ತಪಾಸಣೆ ನಡೆಸಲಾಗುತ್ತದೆ. ಮೊಬೈಲ್, ವಾಚ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ತೆಗೆದುಕೊಂಡು ಹೋಗಲು ಅವಕಾಶವಿಲ್ಲ ಎಂದರು.

ಈ ಬಾರಿಯ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎಲ್ಲರೂ ಗಮನಿಸುತ್ತಿದ್ದಾರೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು.

ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲರೂ ಶಿಸ್ತುಬದ್ಧವಾಗಿ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಕರೆ ನೀಡಿದರು.

ಸಮಯಪಾಲನೆಗೆ ಆದ್ಯತೆ ನೀಡಬೇಕು:

ಇದೇ ವೇಳೆ ಮಾತನಾಡಿದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ., ಪ್ರಶ್ನೆಪತ್ರಿಕೆ ವಿತರಣೆ ಹಾಗೂ ಉತ್ತರ ಪತ್ರಿಕೆಗಳ ಸಂಗ್ರಹಕ್ಕೆ ಸಂಬಂಧಿಸಿದಂತೆ ಸಮಯ ಪಾಲನೆಗೆ ಹೆಚ್ಚು ಒತ್ತು ನೀಡಬೇಕು ಎಂದು ಹೇಳಿದರು. ಪರೀಕ್ಷಾ ಕೇಂದ್ರದ ಮೂಲಸೌಕರ್ಯವನ್ನು ಮುಂಚಿತವಾಗಿ ಪರಿಶೀಲಿಸಿ ಏನಾದರೂ ಅನಾನುಕೂಲ ಕಂಡುಬಂದರೆ ಸರಿಪಡಿಸಬೇಕು ಎಂದರು.

ಪರೀಕ್ಷಾ ಅಕ್ರಮ: ತಂತ್ರಜ್ಞಾನ ದುರ್ಬಳಕೆ ತಡೆಗಟ್ಟಲು ಸಲಹೆ:

ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದು ಸವಾಲಿನ ಕೆಲಸವಾಗಿದ್ದು, ತಂತ್ರಜ್ಞಾನ ದುರ್ಬಳಕೆ ಮಾಡಿಕೊಂಡು ಅಕ್ರಮ ನಡೆಸುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೇಳಿದರು.

ಪರೀಕ್ಷಾರ್ಥಿಗಳ ತಪಾಸಣೆಗೆ ಸಂಬಂಧಿಸಿದಂತೆ ಅಗತ್ಯವಿರುವ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಒದಗಿಸಲಾಗುವುದು.

ಪರೀಕ್ಷೆಯಲ್ಲಿ ಅಕ್ರಮ ನಡೆಯುವ ವಿಧಾನಗಳನ್ನು ವಿವರಿಸಿದ ಅವರು, ಎಲೆಕ್ಟ್ರಾನಿಕ್ ವಸ್ತುಗಳ ಬಳಕೆ, ಬ್ಲೂಟೂಥ್ ಬಳಕೆ ಹಾಗೂ ಓಎಂಆರ್ ಷೀಟ್ ಗಳ ಮೇಲೆ ನಿಗಾವಹಿಸಬೇಕು ಎಂದರು. ಇದಲ್ಲದೇ ಪರೀಕ್ಷಾರ್ಥಿಗಳ ಹಾವಭಾವಗಳನ್ನು ಸೂಕ್ಷ್ಮವಾಗಿ ಗಮನಿಸಬೇಕು ಎಂದು ನಿಂಬರಗಿ ಸಲಹೆ ನೀಡಿದರು.

ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐ ಮೋಹನ ಹಂಚಾಟೆ, ಪರೀಕ್ಷೆಗೆ ನಿಯೋಜಿತರಾದ ಅಧಿಕಾರಿ/ಸಿಬ್ಬಂದಿ ಮುಂಚಿತವಾಗಿಯೇ ಪರೀಕ್ಷಾ ಕೊಠಡಿಗಳನ್ನು ಪರಿಶೀಲಿಸಬೇಕು. ಎಲ್ಲ ಅಗತ್ಯ ಸಾಮಗ್ರಿಗಳನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಪರೀಕ್ಷಾ ಸಮಯ, ಪ್ರಶ್ನೆಪತ್ರಿಕೆಗಳ ಸ್ವೀಕಾರ ಮತ್ತು ವಿತರಣೆ ಕುರಿತ ಮಾರ್ಗಸೂಚಿಗಳನ್ನು ಮತ್ತು ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

ಮೊಬೈಲ್, ವಾಚ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರಿಕ್ಷೆ ಕೊಠಡಿಯಲ್ಲಿ ತೆಗೆದುಕೊಂಡು ಹೋಗಲು ಅವಕಾಶ ನೀಡಬಾರದು ಎಂದು ತಿಳಿಸಿದರು.

ಪ್ರತಿ ಕೊಠಡಿಗೆ ಇಪ್ಪತ್ತು ಪರೀಕ್ಷಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿರುತ್ತದೆ. ಯಾವುದೇ ರೀತಿಯ ಗೊಂದಲ ಮತ್ತು ಅಕ್ರಮಗಳಿಗೆ ಅವಕಾಶ ನೀಡದೇ ಸಮಯಪಾಲನೆ ಜತೆಗೆ ಅಚ್ಚುಕಟ್ಟಾಗಿ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಡಿಡಿಪಿಐ ಹಂಚಾಟೆ ವಿವರಿಸಿದರು.

ಒಟ್ಟು 62 ಪರೀಕ್ಷಾ ಕೇಂದ್ರಗಳಲ್ಲಿ ಜಿಲ್ಲೆಯ ಚಿಕ್ಕೋಡಿ 11,199 ಹಾಗೂ ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 5967 ಸೇರಿದಂತೆ ಒಟ್ಟಾರೆ 17,166 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಬೆಳಗಾವಿ ಡಿಸಿಪಿ ಪಿ.ವಿ.ಸ್ನೇಹಾ, ಇತ್ತೀಚಿಗೆ ಕಂಡುಬಂದಿರುವ ಅಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ಅವುಗಳ ತಡೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದರು.

ಚಿಕ್ಕೋಡಿ ಉಪ ವಿಭಾಗಾಧಿಕಾರಿ ಸಂತೋಷ ಕಾಮಗೌಡ, ಬೆಳಗಾವಿ ಡಿಡಿಪಿಐ ಬಸವರಾಜ ನಾಲತವಾಡ, ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ಎಲ್ಲ ಮಾರ್ಗಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಮೇಲ್ವಿಚಾರಕರು, ವಿಚಕ್ಷಣಾಧಿಕಾರಿಗಳು ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.