
ವಿಧಾನಸೌಧ ಸಭಾಂಗಣದಲ್ಲಿ ಹೈ ಲೆವೆಲ್ ಮೀಟಿಂಗ ನಡೆಸಿದ ಸಿದ್ದರಾಮಯ್ಯ
- Krishna Shinde
- 14 Jan 2024 , 9:21 PM
- Bengaluru
- 272
ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ, ಬೆಂಗಳೂರು ನಗರದ ಸಂಚಾರ ಸಮಸ್ಯೆ ನಿವಾರಣೆ ಹಾಗೂ ಸೈಬರ್ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದರು.

ಜನ ಬದಲಾವಣೆಯ ನಿರೀಕ್ಷೆಯೊಂದಿಗೆ ಹೊಸ ಸರ್ಕಾರವನ್ನು ಚುನಾಯಿಸಿದ್ದಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸಿ ಅಧಿಕಾರಿಗಳು ಕೆಲಸ ಮಾಡಬೇಕು, ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆ ಕುರಿತು ಪ್ರತ್ಯೇಕ ಸಭೆ ನಡೆಸಲಾಗುವುದು, ಸಾಮಾಜಿಕ ಜಾಲತಾಣಗಳಲ್ಲಿ ಸಾಮರಸ್ಯವನ್ನು ಕದಡುವಂತಹ, ತೇಜೋವಧೆ ಮಾಡುವ, ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು. ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಬೇಕು. ಹೊಯ್ಸಳ ಗಸ್ತುವಾಹನ ಸದಾ ಜಾಗೃತವಾಗಿರುವ ಮೂಲಕ ಅಪರಾಧಗಳನ್ನು ತಡೆಗಟ್ಟಬೇಕು ಎಂದು ಹೇಳಿದ್ದಾರೆ.

ಪೊಲೀಸ್ ಠಾಣೆಗಳಿಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಪೊಲೀಸ್ ಠಾಣೆಗೆ ಸಮಸ್ಯೆಗಳ ಪರಿಹಾರಕ್ಕಾಗಿ ಬರುವ ಸಾರ್ವಜನಿಕರನ್ನು ಅಪರಾಧಿಗಳಂತೆ ಕಾಣದೆ ಸೌಜನ್ಯದಿಂದ ವರ್ತಿಸಬೇಕು. ಅವರ ಸಮಸ್ಯೆಗಳನ್ನು ಬಗೆಹರಿಸಿ ನ್ಯಾಯ ಒದಗಿಸಬೇಕು.
ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್ ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಗೂಂಡಾಗಿರಿ, ಅನಧಿಕೃತ ಕ್ಲಬ್‌ಗಳ ಚಟುವಟಿಕೆಗಳು, ಡ್ರಗ್ ಮಾಫಿಯಾವನ್ನು ಸರ್ಕಾರ ಸಹಿಸುವುದಿಲ್ಲ. ಇವುಗಳಿಗೆ ಅವಕಾಶ ನೀಡಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು. ಉತ್ತಮವಾಗಿ ಕೆಲಸ ಮಾಡುವವರಿಗೆ ಶಹಬ್ಬಾಶ್‌ಗಿರಿ ನೀಡುತ್ತೇವೆ, ಕರ್ತವ್ಯಲೋಪ ಎಸಗಿದರೆ ಮುಲಾಜಿಲ್ಲದೆ ಕ್ರಮಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ,
ಕೆ.ಹೆಚ್. ಮುನಿಯಪ್ಪ, ಎಂ.ಪಿ. ಪಾಟೀಲ್, ಸತೀಶ್ ಜಾರಕಿಹೊಳಿ ಮುಂತಾದವರು ಉಪಸ್ಥಿತರಿದ್ದರು.